ಸರಸಂಬಾ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಕೊಡಗಳನ್ನು ಸಾಲಿನಲ್ಲಿ ಇಟ್ಟಿರುವ ಜನತೆ
ಆಳಂದ ತಾಲೂಕಿನಲ್ಲಿ ಮೂರು ವರ್ಷಗಳಿಂದ ಅಭಿವೃದ್ಧಿ ಎನ್ನುವುದು ಕಾಣೆಯಾಗಿದೆ ಶಾಸಕ ಬಿ ಆರ್ ಪಾಟೀಲರ ಸ್ವಂತ ಗ್ರಾಮ ಸರಸಂಬಾದಲ್ಲಿ ಜೂನ್ ತಿಂಗಳು ಆರಂಭವಾದರೂ ಕುಡಿಯುವ ನೀರಿನ ಬವಣೆ ತಪ್ಪಿಲ್ಲ ಗ್ರಾಮಸ್ಥರು ಕುಡಿಯುವ ನೀರಿಗಾಗಿ ದಿನಪೂರ್ತಿ ಕೊಡಗಳೊಂದಿಗೆ ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾಲೂಕಿನ ಹಲವು ಗ್ರಾಮಗಳು ಗಂಭೀರ ಕುಡಿಯುವ ನೀರಿನ ಪರಿಸ್ಥಿತಿ ಎದುರುಸುತ್ತಿವೆ. ಆಳಂದ ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಶಿರಪೂರ ಮಾದರಿ ಕಾಮಗಾರಿಗಳು ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಸರ್ಕಾರದ ಹಣವನ್ನು ಸಮರ್ಪಕವಾಗಿ ಬಳಸುವಲ್ಲಿ ಸಂಬAಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.
ಆಳಂದ ತಾಲೂಕು ಬರಪೀಡಿತ ಪ್ರದೇಶವಾಗಿದ್ದು, ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಶಿರಪೂರ ಮಾದರಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ ಯೋಜನೆಯ ಮೂಲ ಉದ್ದೇಶವೇ ಹಾಳಾಗಿದ್ದು, ಅನೇಕ ಕಡೆಗಳಲ್ಲಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳದೇ ಕೇವಲ ಹಣ ಖರ್ಚು ಮಾಡುವ ಉದ್ದೇಶದಿಂದ ನಡೆಸಲಾಗಿದೆ ಎಂದು ಹೇಳಿದ್ದಾರೆ.
ತಾಲೂಕಿನ ಹಲವಾರು ಹಳ್ಳಿಗಳಲ್ಲಿ ಶಿರಪೂರ ಮಾದರಿ ಕಾಮಗಾರಿಗಳಿಂದ ಅಂತರ್ಜಲ ಮಟ್ಟ ಹೆಚ್ಚಾಗಿಲ್ಲ. ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ನೀರು ಸಂಗ್ರಹವಾಗಬೇಕಾದ ಸ್ಥಳಗಳಲ್ಲಿ ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಯೋಜನೆ ಪರಿಣಾಮಕಾರಿಯಾಗಿಲ್ಲ. ಯೋಜನೆಗೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದರೂ ನಿರೀಕ್ಷಿತ ಫಲಿತಾಂಶ ಕಂಡುಬAದಿಲ್ಲ ಎಂದು ಆಪಾದಿಸಿದ್ದಾರೆ.
ಶಿರಪೂರ ಮಾದರಿ ಹೆಸರಿನಲ್ಲಿ ನಡೆದ ಕಾಮಗಾರಿಗಳ ಗುಣಮಟ್ಟದ ಕುರಿತು ಸಮಗ್ರ ತನಿಖೆ ನಡೆಸಬೇಕು. ಯಾವ ಯಾವ ಸ್ಥಳಗಳಲ್ಲಿ ಕಾಮಗಾರಿಗಳು ನಡೆದಿವೆ, ಎಷ್ಟು ಹಣ ವೆಚ್ಚವಾಗಿದೆ ಹಾಗೂ ಅದರ ಫಲಿತಾಂಶ ಏನು ಎಂಬುದರ ಕುರಿತು ಶ್ವೇತಪತ್ರ ಹೊರಡಿಸಬೇಕು. ಇದರ ಕುರಿತು ತಾವು ಮಾಹಿತಿ ಹಕ್ಕಿನಡಿ ಅರ್ಜಿ ಹಾಕಿದರೂ ಉತ್ತರ ನೀಡಿಲ್ಲ ಇದನ್ನು ಮಾಹಿತಿ ಹಕ್ಕು ಆಯೋಗದಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದ್ದಾರೆ.
ಜನರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಾಲೂಕಿನಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ವೈಜ್ಞಾನಿಕ ಮತ್ತು ಶಾಶ್ವತ ಯೋಜನೆಗಳನ್ನು ರೂಪಿಸುವುದು ಅಗತ್ಯವಾಗಿದೆ. ಕೇವಲ ಪ್ರಚಾರಕ್ಕಾಗಿ ಯೋಜನೆಗಳನ್ನು ಜಾರಿಗೊಳಿಸುವುದರಿಂದ ರೈತರ ಮತ್ತು ಸಾರ್ವಜನಿಕರ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ಆರೋಪಿಸಿದ್ದಾರೆ.
ಮಾದನಹಿಪ್ಪರ್ಗಾ ಠಾಣೆಯ ಪಿಎಸ್‌ಐ ರಾಜಕೀಯ ಪ್ರೇರಿತವಾಗಿ ಕಾರ್ಯನಿರ್ವಹಿಸುತ್ತಿದ್ದು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಪ್ರಕರಣ ದಾಖಲಿಸಿ ತೊಂದರೆ ನೀಡುತ್ತಿದ್ದಾರೆ. ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು ಹೋಗಿದೆ. ಮಟಕಾ, ಇಸ್ಪೀಟ್ ಎಗ್ಗಿಲ್ಲದೇ ನಡೆಯುತ್ತಿದೆ ಇದರ ಕುರಿತು ಕ್ರಮ ತೆಗೆದುಕೊಳ್ಳಬೇಕಾದವರು ಯಾವುದೇ ಕಾನೂನು ಕ್ರಮಕ್ಕೆ ಮುಂದಾಗುತ್ತಿಲ್ಲ. ಆಳಂದ ತಾಲೂಕಿನ ಜನರು ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಅವ್ಯವಸ್ಥೆಗಳನ್ನು ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ವಿಷಯದ ಕುರಿತು ಜನಾಂದೋಲನ ರೂಪಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.