Shubhashaya News

ಎಸ್ಐಆರ್ ಪ್ರಕ್ರಿಯೆಯಲ್ಲಿ ಅನರ್ಹರು ಸೇರದಂತೆ ಎಚ್ಚರ ವಹಿಸಿ: ಹಣಮಂತ ಶೇರಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅನರ್ಹ ವ್ಯಕ್ತಿಗಳು ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಆಳಂದ ಘಟಕದ ಅಧ್ಯಕ್ಷರು ಹಾಗೂ ಸಮಾಜಮುಖಿ ಚಿಂತಕರಾದ ಹಣಮಂತ ಶೇರಿ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಅದರ ವಿಶ್ವಾಸಾರ್ಹತೆಯನ್ನು ಕಾಪಾಡುವುದು ಚುನಾವಣಾ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಅರ್ಹ ಮತದಾರರ ಹೆಸರನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಅದೇ ವೇಳೆ ಅನರ್ಹರು, ನಕಲಿ ದಾಖಲೆಗಳ ಮೂಲಕ ಅಥವಾ ಸುಳ್ಳು ಮಾಹಿತಿಯ ಆಧಾರದ ಮೇಲೆ ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಪಾರದರ್ಶಕತೆ, ನಿಷ್ಪಕ್ಷಪಾತತೆ ಹಾಗೂ ಕಾನೂನುಬದ್ಧ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಬೇಕು. ಯಾವುದೇ ದೂರುಗಳು ಬಂದಲ್ಲಿ ಅವುಗಳನ್ನು ತ್ವರಿತವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಪ್ರಜಾಪ್ರಭುತ್ವದ ಪಾವಿತ್ರ್ಯವನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಸಾರ್ವಜನಿಕರು ಸಹ ತಮ್ಮ ಮತದಾರರ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಸಮಯಕ್ಕೆ ಸರಿಯಾಗಿ ಮಾಡಿಸಿಕೊಳ್ಳಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಹಣಮಂತ ಶೇರಿ ಅವರು ಮನವಿ ಮಾಡಿದ್ದಾರೆ.

Leave A Reply

Your email address will not be published.