Shubhashaya News

ಏಕರೆಗೆ ₹50 ಸಾವಿರ ಬರ ಪರಿಹಾರ ನೀಡಿ

ಆಳಂದ ಸೇರಿ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ – ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ ಆಗ್ರಹ

ಮುಂಗಾರು ವೈಫಲ್ಯದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಕಲಬುರಗಿ ಜಿಲ್ಲೆ ಸೇರಿದಂತೆ ಆಳಂದ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ವಿಶೇಷ ಬರ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅನೇಕ ರೈತರು ಸಾಲ ಮಾಡಿ ಬಿತ್ತನೆ ನಡೆಸಿದ್ದರೂ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ತುರ್ತಾಗಿ ಧಾವಿಸಬೇಕು ಎಂದು ಒತ್ತಾಯಿಸಿದರು.

ಬರದ ಪರಿಣಾಮ ಕೇವಲ ಕೃಷಿ ಮಾತ್ರವಲ್ಲದೆ ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಸಮಸ್ಯೆಯೂ ಉಲ್ಬಣವಾಗಿದೆ. ಕೆರೆ-ಕಟ್ಟೆಗಳು ಹಾಗೂ ಬಾವಿಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಹೇಳಿದರು.

ರಾಜ್ಯ ಸರ್ಕಾರದ ಅಧಿಕಾರಿಗಳ ತಂಡವನ್ನು ಕೂಡಲೇ ಜಿಲ್ಲೆಗೆ ಕಳುಹಿಸಿ ಬೆಳೆಹಾನಿ ಸಮೀಕ್ಷೆ ನಡೆಸಬೇಕು. ಕೇಂದ್ರ ಸರ್ಕಾರಕ್ಕೂ ವರದಿ ಸಲ್ಲಿಸಿ ಅಗತ್ಯ ನೆರವು ಪಡೆಯಬೇಕು. ಅಲ್ಲದೆ ರೈತರ ಬೆಳೆ ಸಾಲ ವಸೂಲಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಹೊಸ ಸಾಲ ಹಾಗೂ ಬಡ್ಡಿರಹಿತ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಗುತ್ತೇದಾರ ಆಗ್ರಹಿಸಿದರು.

ರೈತರ ಬದುಕು ಸಂಪೂರ್ಣವಾಗಿ ಮಳೆಯನ್ನೇ ಅವಲಂಬಿಸಿದ್ದು, ಸಕಾಲದಲ್ಲಿ ಸರ್ಕಾರ ಸೂಕ್ತ ಪರಿಹಾರ ಘೋಷಿಸದಿದ್ದರೆ ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀಳಲಿದೆ. ಆದ್ದರಿಂದ ಯಾವುದೇ ವಿಳಂಬ ಮಾಡದೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ಸಮರ್ಪಕ ಮೇವು, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಅಗತ್ಯ ಪರಿಹಾರ ಪ್ಯಾಕೇಜ್ ಅನ್ನು ತಕ್ಷಣ ಘೋಷಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಅಗತ್ಯವಿದ್ದರೆ ರೈತರ ಹಿತರಕ್ಷಣೆಗೆ ಬಿಜೆಪಿ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ ಎಚ್ಚರಿಕೆ ನೀಡಿದರು.

Leave A Reply

Your email address will not be published.