ಕಾಳಗಿ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ ವಿದ್ಯಾರ್ಥಿ ಯುವಜನ ಒಕ್ಕೂಟ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಪಟ್ಟಣದ ಹಳೆಬಸ್ ನಿಲ್ದಾಣದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ವಿದ್ಯಾರ್ಥಿ ಯುವಜನ ಒಕ್ಕೂಟ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶಿಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮುಖಂಡರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ನೀಟ್‌ನಂತಹ ಮಹತ್ವದ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಇದರಿಂದ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿದಿದ್ದು, ವಿದ್ಯಾರ್ಥಿಗಳಲ್ಲಿ ಅನಿಶ್ಚಿತತೆ ಮತ್ತು ಆತಂಕ ಸೃಷ್ಟಿಯಾಗಿದೆ ಎಂದು ಆರೋಪಿಸಿದರು.
ನೀಟ್ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಸಂಪೂರ್ಣ ನೈತಿಕ ಹೊಣೆಯನ್ನು ಕೇಂದ್ರ ಸರಕಾರ ಹೊತ್ತುಕೊಳ್ಳಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ವಿದ್ಯಾರ್ಥಿಗಳು ಮತ್ತು ಪೋಷಕರ ಕ್ಷಮೆ ಕೇಳಬೇಕು. ದೇಶದ ಉನ್ನತ ಶಿಕ್ಷಣ ಪ್ರವೇಶ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಅಥವಾ ಸ್ವತಂತ್ರ ಸಂಸ್ಥೆಯ ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ನೀಟ್ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಮಧ್ಯವರ್ತಿಗಳನ್ನು ಗುರುತಿಸಿ ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಯಾವುದೇ ಪ್ರಭಾವಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಾಗ ಮಾತ್ರ ವಿದ್ಯಾರ್ಥಿಗಳಲ್ಲಿ ವಿಶ್ವಾಸ ಮೂಡಲಿದೆ ಎಂದು ಹೇಳಿದರು. ಕೇಂದ್ರ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಮುಖಂಡರಾದ ರಾಘವೇಂದ್ರ ಗುತ್ತೇದಾರ, ಶರಣು ಮಜ್ಜಗಿ, ಗುರುನಂದೇಶ ಕೊಣಿನ್, ಪ್ರದೀಪ ಡೊಣ್ಣೂರ, ಅವಿನಾಶ್ ಕೊಡದೂರ, ದಿನೇಶ್ ಮೋಘಾ, ಅವಿನಾಶ ಗುತ್ತೇದಾರ, ಬಂಡು ಗದ್ದಿ, ಗಣಪತಿ ಹಾಳಕಾಯಿ, ಗಂಗಾಧರ ಮಾಡಬೂಳ, ಸದ್ದಾಂ ಇನಾಮದಾರ, ಪವಾನ ಡೊಣ್ಣೂರ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಇದ್ದರು.