ಆಳಂದ: ಬಾಲಖೇಡ್ ಗ್ರಾಮದ ರಸ್ತೆಗೆ ಒತ್ತುವರಿಯಾದ ಎನ್ನಲಾದ ವಿವಾದಿತ ಸ್ಥಳ
ಆಳಂದ: ತಾಲೂಕಿನ ಬಾಲಖೇಡ ಗ್ರಾಮದಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಅನಧಿಕೃತವಾಗಿ ಗೋಡೆ ನಿರ್ಮಿಸಿ ಸಂಚಾರಕ್ಕೆ ಅಡ್ಡಿ ಉಂಟು ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ಕುರಿತು ದೂರು ಸಲ್ಲಿಸಲು ತೆರಳಿದರೂ ಆಳಂದ ಪೊಲೀಸ್ ಠಾಣೆಯಲ್ಲಿ ಸ್ವೀಕರಿಸದಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮಸ್ಥರ ಆರೋಪದ ಪ್ರಕಾರ, ಪೀರಪ್ಪ ತಂದೆ ಚಂದಪ್ಪ ಮಾಂಗ ಅವರು ಸಾರ್ವಜನಿಕ ರಸ್ತೆಯ ಮೇಲೆ ಗೋಡೆ ನಿರ್ಮಿಸಿದ್ದು, ಹಲವು ವರ್ಷಗಳಿಂದ ಬಳಕೆಯಲ್ಲಿದ್ದ ರಸ್ತೆ ಬಂದ್ ಆಗಿದೆ. ಇದರಿಂದ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು. ಗ್ರಾಮ ಪಂಚಾಯಿತಿ ಅನುಮತಿ ಇಲ್ಲದೆ ನಿರ್ಮಾಣ ಮಾಡಲಾಗಿದೆ ಎಂದು ಉಲ್ಲೇಖಿಸಿ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಕಲಂ ೬೪(೧)ರಡಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಲು ಯತ್ನಿಸಿದರೂ ಪ್ರಕರಣ ದಾಖಲಿಸಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸುಮಾರು ೪೪ ಮಂದಿ ಗ್ರಾಮಸ್ಥರು ಠಾಣೆಗೆ ತೆರಳಿ ದೂರು ಸ್ವೀಕರಿಸುವಂತೆ ಮನವಿ ಮಾಡಿದರೂ ಸ್ಪಂದನೆ ದೊರೆಯಲಿಲ್ಲ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕ ರಸ್ತೆ ಒತ್ತುವರಿ ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪೊಲೀಸರ ಪ್ರತಿಕ್ರಿಯೆ: ಈ ಕುರಿತು ಆಳಂದ ಪೊಲೀಸ್ ಠಾಣೆಯ ಪಿಐ ಶರಣಬಸಪ್ಪ ಕೊಡ್ಲಾ ಪ್ರತಿಕ್ರಿಯಿಸಿ, “ಸಾರ್ವಜನಿಕ ರಸ್ತೆ ಒತ್ತುವರಿ ತೆರವುಗೊಳಿಸುವ ಅಧಿಕಾರ ಗ್ರಾಮ ಪಂಚಾಯಿತಿಗೆ ಸೇರಿದೆ. ಈ ಪ್ರಕರಣದಲ್ಲಿ ಪೊಲೀಸರ ನೇರ ಪಾತ್ರವಿಲ್ಲ. ಪಂಚಾಯಿತಿ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಬಂದೋಬಸ್ತ್ ಕೋರಿದರೆ ಪೊಲೀಸ್ ಇಲಾಖೆ ಅಗತ್ಯ ಭದ್ರತೆ ಒದಗಿಸುತ್ತದೆ,” ಎಂದು ತಿಳಿಸಿದ್ದಾರೆ.