Shubhashaya News

ರಸ್ತೆ ಸುರಕ್ಷತೆ, ಅಪಘಾತ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಇಕ್ರಂ ಶರೀಫ್

ಕಲಬುರಗಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವುದರ ಜೊತೆಗೆ, ಹೆದ್ದಾರಿಗಳಲ್ಲಿ ಸಂಚಾರ ಸುಗಮಗೊಳಿಸಲು ಹಾಗೂ ಮಿತಿಮೀರಿದ ಸರಕು ಸಾಗಣೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಂತೆ ರಸ್ತೆ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ರಸ್ತೆ ಸುರಕ್ಷತಾ ಕ್ರಮಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಚಿತ್ತಾಪುರ, ಸೇಡಂ, ವಾಡಿ ಹಾಗೂ ಜೇವರ್ಗಿ ಭಾಗಗಳಲ್ಲಿರುವ ಗಣಿ ಮತ್ತು ಕ್ವಾರಿಗಳಿಂದ ಮಿತಿಮೀರಿದ ಭಾರ ಹೊತ್ತು ಸಾಗುವ ಲಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯ ಎಲ್ಲ ಗಣಿ ಮತ್ತು ಕ್ವಾರಿಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳಲ್ಲಿ 15 ದಿನಗಳೊಳಗಾಗಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಸಿಸಿಟಿವಿಗಳ ಲೈವ್ ಲಿಂಕ್‌ನ್ನು ಆರ್‌ಟಿಒ ಹಾಗೂ ಪೊಲೀಸ್ ಅಧಿಕಾರಿಗಳ ಮೊಬೈಲ್‌ಗಳಿಗೆ ಸಂಪರ್ಕಿಸುವ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ನಿಯಮ ಉಲ್ಲಂಘಿಸುವ ವಾಹನಗಳನ್ನು ಜಪ್ತಿ ಮಾಡುವುದರೊಂದಿಗೆ ಎಫ್‌ಐಆರ್ ದಾಖಲಿಸಬೇಕು. ಗಂಭೀರ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟ ಕ್ವಾರಿಗಳ ಪರವಾನಗಿ ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಹೆದ್ದಾರಿಗಳಲ್ಲಿ ಅತಿವೇಗವಾಗಿ ಸಂಚರಿಸುವ ವಾಹನಗಳನ್ನು ಪತ್ತೆಹಚ್ಚಲು ‘ಸ್ಪೀಡ್ ಡಿಟೆಕ್ಷನ್ ಗನ್‌’ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಣಾಮಕಾರಿಯಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಕೆಎಸ್‌ಆರ್‌ಟಿಸಿ ಬಸ್‌ಗಳು, ಲಾರಿಗಳು ಹಾಗೂ ಸಿಮೆಂಟ್ ಕಾರ್ಖಾನೆಗಳ ವಾಹನಗಳಲ್ಲಿ ‘ಸ್ಪೀಡ್ ಗವರ್ನರ್’ ಅಳವಡಿಸಿರುವುದನ್ನು ಖಾತರಿಪಡಿಸಿಕೊಳ್ಳಲು ಸಾರಿಗೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ತಪಾಸಣೆ ನಡೆಸಬೇಕು ಎಂದರು.

ಹೆದ್ದಾರಿ ಬದಿಗಳಲ್ಲಿ ಭಾರಿ ವಾಹನಗಳ ಅಸ್ತವ್ಯಸ್ತ ಪಾರ್ಕಿಂಗ್‌ನಿಂದ ಉಂಟಾಗುತ್ತಿರುವ ಸಮಸ್ಯೆ ತಪ್ಪಿಸಲು ಸೇಡಂ, ಚಿತ್ತಾಪುರ ಹಾಗೂ ಸಿರಸಗಿ ಭಾಗಗಳಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಿ ಪ್ರಸ್ತಾವನೆ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ (PWD) ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಅಧಿಕಾರಿಗಳಿಗೆ ಸೂಚಿಸಿದರು.

ವಾಹನಗಳ ತೂಕ ಪರಿಶೀಲನೆಗಾಗಿ ಹೊಸ ಡಿಜಿಟಲ್ ವೇಬ್ರಿಡ್ಜ್‌ಗಳನ್ನು ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳಬೇಕು. ನಗರ ವ್ಯಾಪ್ತಿಯಲ್ಲಿ ಬೆಳಿಗ್ಗೆ 7ರಿಂದ ರಾತ್ರಿ 10ರವರೆಗೆ ಭಾರಿ ವಾಹನಗಳ ಪ್ರವೇಶದ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಹೇಳಿದರು.

30 ದಿನಗಳಲ್ಲಿ ರಸ್ತೆ ಸುರಕ್ಷತಾ ಆಡಿಟ್:

ದಿನಕ್ಕೆ 40 ಸಾವಿರಕ್ಕೂ ಅಧಿಕ ವಾಹನಗಳ ಸಂಚಾರವಿರುವ ಹುಮನಾಬಾದ್ ಕ್ರಾಸ್‌ನಿಂದ ಅಫಜಲಪುರ ಕ್ರಾಸ್‌ವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಹಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಿಲ್ಲಾದ್ಯಂತ ಮುಂದಿನ 30 ದಿನಗಳೊಳಗಾಗಿ ಸಮಗ್ರ ‘ರಸ್ತೆ ಸುರಕ್ಷತಾ ಆಡಿಟ್’ ನಡೆಸಿ, ಅಪಘಾತಗಳಿಗೆ ಕಾರಣವಾಗುತ್ತಿರುವ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಸುಧಾರಣಾ ಕ್ರಮ ಕೈಗೊಳ್ಳಬೇಕು. ಭಾರತೀಯ ರಸ್ತೆ ಕಾಂಗ್ರೆಸ್ (IRC) ಮಾನದಂಡಗಳಿಗೆ ವಿರುದ್ಧವಾಗಿ ನಿರ್ಮಿಸಿರುವ ಅವೈಜ್ಞಾನಿಕ ಗತಿರೋಧಕಗಳನ್ನು ತಕ್ಷಣ ತೆರವುಗೊಳಿಸಿ, ಅಗತ್ಯವಿರುವ ಕಡೆ ರೇಡಿಯಂ ರಿಫ್ಲೆಕ್ಟರ್‌ಗಳು ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ಈ ಕಾರ್ಯವನ್ನು ‘ಮಿಷನ್ ಮೋಡ್’ನಲ್ಲಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

“ರಸ್ತೆ ಅಪಘಾತಗಳಿಂದಾಗುವ ಪ್ರಾಣಹಾನಿ ತಡೆಗಟ್ಟುವುದೇ ನಮ್ಮ ಮುಖ್ಯ ಉದ್ದೇಶ. ರಸ್ತೆ ದುರಸ್ತಿ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ಅಥವಾ ಉದ್ದೇಶಪೂರ್ವಕ ವಿಳಂಬ ಕಂಡುಬಂದರೆ, ಸಂಬಂಧಪಟ್ಟವರ ವಿರುದ್ಧ ನೇರವಾಗಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಉಪ ಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ್ ಪಾರ್ಥನಳ್ಳಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ರಾಹುಲ್ ಕಾಂಬ್ಳೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.