ವಾಡಿ: ನಾಲವಾರ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ವಿಸ್ತರಣಾ ಶಿಕ್ಷಣ ಘಟಕದ ವತಿಯಿಂದ ಶೇಂಗಾ ಬೆಳೆಯ ಉತ್ಪಾದನೆ ಹೆಚ್ಚಿಸುವ ಕುರಿತು ರೈತರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಅ.24ರಂದು ಆಯೋಜಿಸಲಾಗಿದೆ ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಲ್ಲಿಕಾರ್ಜುನ ಕಂದಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅ.24ರಂದು ಬೆಳಿಗ್ಗೆ 10.30ಕ್ಕೆ ನಾಲವಾರ ರೈತ ಸಂಪರ್ಕ ಕೇಂದ್ರದಲ್ಲಿ ತರಬೇತಿ ಕಾರ್ಯಕ್ರಮ ಆರಂಭವಾಗಲಿದೆ. ನಾಲವಾರ ಹೋಬಳಿಯಲ್ಲಿ ಶೇಂಗಾ ಪ್ರಮುಖ ಹಿಂಗಾರು ಬೆಳೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 5,350 ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬೆಳೆಯುವ ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಅನುಭವಿ ಕೃಷಿ ವಿಜ್ಞಾನಿಗಳಿಂದ ರೈತರಿಗೆ ವೈಜ್ಞಾನಿಕ ಹಾಗೂ ಪ್ರಾಯೋಗಿಕ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ತರಬೇತಿ ಕಾರ್ಯಕ್ರಮದಲ್ಲಿ ಭೂಮಿ ಸಿದ್ಧತೆ, ಸೂಕ್ತ ತಳಿ ಹಾಗೂ ಗುಣಮಟ್ಟದ ಬೀಜಗಳ ಆಯ್ಕೆ, ಬೀಜ ಮೊಳಕೆ ಪರೀಕ್ಷೆ, ಬೀಜೋಪಚಾರ, ಬಿತ್ತನೆ ಸಮಯ ಮತ್ತು ವಿಧಾನ, ಬೀಜ ಹಾಗೂ ಸಾಲಿನ ಅಂತರ, ಕಳೆ ನಿರ್ವಹಣೆ, ಕೀಟ ಹಾಗೂ ರೋಗಗಳ ನಿಯಂತ್ರಣ ಸೇರಿದಂತೆ ಶೇಂಗಾ ಬೆಳೆಯ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುವುದು.
ಇದರೊಂದಿಗೆ ಕೃಷಿ ಇಲಾಖೆಯಿಂದ ಶೇಂಗಾ ಬೆಳೆಗೆ ಅಗತ್ಯವಿರುವ ಪರಿಕರಗಳ ಲಭ್ಯತೆ, ಅವುಗಳನ್ನು ಪಡೆಯುವ ವಿಧಾನ ಹಾಗೂ ಇಲಾಖೆಯ ವಿವಿಧ ಸೌಲಭ್ಯಗಳ ಕುರಿತು ರೈತರಿಗೆ ಮಾಹಿತಿ ನೀಡಲಾಗುವುದು. ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಂಡು ಶೇಂಗಾ ಬೆಳೆಯ ಉತ್ಪಾದನೆ ಮತ್ತು ಗುಣಮಟ್ಟ ಹೆಚ್ಚಿಸಿಕೊಳ್ಳಲು ತರಬೇತಿ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ನಾಲವಾರ ಹೋಬಳಿಯ ಎಲ್ಲ ರೈತರು ತರಬೇತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕೃಷಿ ವಿಜ್ಞಾನಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಅಧಿಕಾರಿ ಮಲ್ಲಿಕಾರ್ಜುನ ಕಂದಾರ ಮನವಿ ಮಾಡಿದ್ದಾರೆ.