Shubhashaya News

BREAKING : ‘KPSC’ ಹಗರಣ : ಹೈಕೋರ್ಟ್ ರಚಿಸಿದ್ದ ‘SIT’ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರ!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹಾಗೂ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಹೈಕೋರ್ಟ್ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಈ ಪ್ರಕರಣದ ತನಿಖೆಗೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ 5 ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಿ, 100 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಧಾರವಾಡ ಹೈಕೋರ್ಟ್ ಪೀಠ ಆದೇಶಿಸಿತ್ತು. ಹೈಕೋರ್ಟ್‌ನ ಈ ನಿರ್ದೇಶನ ಹಾಗೂ ನ್ಯಾಯಾಲಯವೇ ನಿರ್ದಿಷ್ಟ ಅಧಿಕಾರಿಗಳನ್ನು ತನಿಖೆಗೆ ನೇಮಿಸಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ (SLP) ಸಲ್ಲಿಸಿದ್ದು, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿದೆ.

ಈ ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿ (CID) ನಡೆಸಿ ಶೇ. 80ರಷ್ಟು ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಪ್ರಮುಖ ಸಾಕ್ಷ್ಯಗಳು ಹಾಗೂ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಹೀಗಿರುವಾಗ ಹೊಸದಾಗಿ ಎಸ್‌ಐಟಿ ರಚನೆಯ ಅಗತ್ಯವಿಲ್ಲ ಮತ್ತು ನ್ಯಾಯಾಲಯವೇ ತನಿಖಾಧಿಕಾರಿಗಳನ್ನು ಆಯ್ಕೆ ಮಾಡಿರುವುದು ಕಾರ್ಯಾಂಗದ ಅಧಿಕಾರ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ವಾದಿಸಿದೆ. ಇನ್ನೊಂದೆಡೆ, ಸರ್ಕಾರದ ಈ ನಡೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಹೈಕೋರ್ಟ್ ಮೇಲ್ವಿಚಾರಣೆಯ ತನಿಖೆಯಿಂದ ಸರ್ಕಾರ ಏಕಾಗಿ ಹಿಂದೆ ಸರಿಯುತ್ತಿದೆ ಮತ್ತು ಯಾರನ್ನು ರಕ್ಷಿಸಲು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ ಎಂದು ಪ್ರಶ್ನಿಸಿದೆ.

ಹೈಕೋರ್ಟ್ ನೀಡಿದ ಆದೇಶವೇನು?

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದ ತನಿಖೆಗಾಗಿ ಕರ್ನಾಟಕ ಹೈಕೋರ್ಟ್ ಸೋಮವಾರ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದೆ. ಜೈಲು ಮತ್ತು ತಿದ್ದುಪಡಿ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಎಸ್ಐಟಿಯಲ್ಲಿ ಐಪಿಎಸ್ ಅಧಿಕಾರಿಗಳಾದ ದಿವ್ಯಾ ವಿ ಗೋಪಿನಾಥ್, ಅನುಪ್ ಎ ಶೆಟ್ಟಿ, ಕುಶಾಲ್ ಚೌಕ್ಸೆ ಮತ್ತು ಕ್ಷಮಾ ಮಿಶ್ರಾ ಅವರನ್ನು ಸದಸ್ಯರನ್ನಾಗಿ ನ್ಯಾಯಾಲಯ ನೇಮಿಸಿದೆ.

ಕೆಪಿಎಸ್ ಸಿ ಹಗರಣ ಕುರಿತು ಸಿಬಿಐ ತನಿಖೆ ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಎಸ್ಐಟಿ ತನಿಖೆಗೆ ಆದೇಶಿಸಿದೆ. ಮುಂದಿನ 100 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. 30 ದಿನಗಳಿಗೆ ಒಮ್ಮೆ ತನಿಖಾ ವರದಿಯ ವಿವರಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಬೇಕು ಎಂದು ಒಟ್ಟು 17 ನಿರ್ದೇಶಗಳನ್ನು ಹೈಕೋರ್ಟ್ ಎಸ್ ಐಟಿಗೆ ನೀಡಿದೆ.

 

Leave A Reply

Your email address will not be published.