Shubhashaya News

ಅಲ್ಪಸಂಖ್ಯಾತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಮೇಲೆ ಒತ್ತಡ: ಶಾಸಕ ಹ್ಯಾರಿಸ್ ನಲಪಾಡ್

ಕಲಬುರಗಿ: ಅಲ್ಪಸಂಖ್ಯಾತ ಶಾಸಕರು ಹಾಗೂ ಸಂಸದರು ಒಗ್ಗೂಡಿ ಒಕ್ಕೂಟ ರಚಿಸಿದ್ದು, ಅಲ್ಪಸಂಖ್ಯಾತರು ಸೇರಿದಂತೆ ಸಾಮಾನ್ಯ ಜನರ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಅಲ್ಪಸಂಖ್ಯಾತ ಶಾಸಕರ ಒಕ್ಕೂಟದ ಅಧ್ಯಕ್ಷ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಶಾಸಕ ಎನ್.ಎ.ಹ್ಯಾರಿಸ್ ನಲಪಾಡ್ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧವಾ ವೇತನ, ಅಂಗವಿಕಲರ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಅಲ್ಪಸಂಖ್ಯಾತರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಸಂಘಟನೆಯ ಮೂಲಕ ಸರ್ಕಾರದ ಗಮನಕ್ಕೆ ತಂದು, ಅವುಗಳ ಪರಿಹಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾಮಾನ್ಯ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಸಂಘಟನೆ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಅಂಗವಿಕಲರ ವೇತನ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರುಗಳು ಬಂದಿವೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಯೋಜನೆಗಳಿಗೆ ಫಲಾನುಭವಿಗಳು ಅರ್ಜಿ ಸಲ್ಲಿಸಿದ ಬಳಿಕವೂ ಕೆಲವು ಸಮಸ್ಯೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ವ್ಯವಸ್ಥೆಯಲ್ಲಿನ ಲೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದ್ದು, ಅಗತ್ಯವಿದ್ದಲ್ಲಿ ತನಿಖೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಸುಮಾರು 55 ಸಾವಿರ ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಪ್ರಯೋಜನ ರಾಜ್ಯದ ಜನರಿಗೆ ತಲುಪುತ್ತಿದೆ. ರಾಜ್ಯದ ಅಭಿವೃದ್ಧಿಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಹಿನ್ನಡೆಯಾಗಿರಬಹುದು ಎಂಬ ಟೀಕೆಗಳಿದ್ದರೂ, ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು.

ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದ ಬಳಿಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಜನಪರ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದರು.

ಹಾಲಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಹಾಗೂ ಅವರ ಒತ್ತಡದಿಂದಾಗಿ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಟ್ಟದಲ್ಲಿ ಹಲವು ಬೆಲೆ ಏರಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಬೆಲೆ ಏರಿಕೆಗೆ ಮುಂದಾಗಿಲ್ಲ ಎಂದು ಹೇಳಿದರು.

ಬರಪೀಡಿತ ಪ್ರದೇಶಗಳಿಗೆ ಅಗತ್ಯವಿರುವ ಅನುದಾನವನ್ನು ಕೇಂದ್ರ ಸರ್ಕಾರ ಸಮರ್ಪಕವಾಗಿ ನೀಡುತ್ತಿಲ್ಲ. ಈ ಕುರಿತು ರಾಜ್ಯ ಸರ್ಕಾರ ತನ್ನ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ ಎಂದರು.

ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದು, ಬೀದರ್ ಜಿಲ್ಲೆಯ ಪ್ರವಾಸ ಪೂರ್ಣಗೊಳಿಸಿ ಇದೀಗ ಕಲಬುರಗಿಗೆ ಆಗಮಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಉಳಿದ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಅಲ್ಪಸಂಖ್ಯಾತರ ವಿವಿಧ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಶೇಕಡಾ 8ರಷ್ಟು ನಿವೇಶನಗಳನ್ನು ಮೀಸಲಿಡಬೇಕು ಹಾಗೂ ಈ ಭಾಗದ ಜನರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆಯ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದು ಹ್ಯಾರಿಸ್ ನಲಪಾಡ್ ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕಿ ಖನೀಜ್ ಫಾತಿಮಾ, ಬಿಲ್ಕಿಸ್ ಬಾನು, ಮಝಹರ್ ಖಾನ್ ಆಲಂ, ಅಹ್ಮದ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿರಣ್ ದೇಶಮುಖ್, ಫರಾಜ್ ಉಲ್ ಇಸ್ಲಾಂ ಹಾಗೂ ಕೆಪಿಸಿಸಿ ಸದಸ್ಯ ಲಾಲ್ ಅಹ್ಮದ್ ಸೇಠ್ ಮತ್ತಿತ್ತರರು ಉಪಸ್ಥಿತರಿದ್ದರು.

Leave A Reply

Your email address will not be published.