ಕಲಬುರಗಿ: ವಿಧಾನ ಪರಿಷತ್ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಸುಶಿಕ್ಷಿತ ಮತದಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ಪಷ್ಟ ತೀರ್ಪು ನೀಡಿದ್ದಾರೆ. ಸರ್ಕಾರದ ವೈಫಲ್ಯಗಳಿಗೆ ಮತದಾರರು ಬಡ್ಡಿ ಸಮೇತ ಉತ್ತರ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ಜಿ. ನಮೋಶಿ ಅವರ ಗೆಲುವನ್ನು ಶಿಕ್ಷಕರ ಸಮುದಾಯಕ್ಕೆ ಸಮರ್ಪಿಸುತ್ತೇವೆ. ಶಶೀಲ್ ನಮೋಶಿ ಅವರು 15,596 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಪದವೀಧರ ಕ್ಷೇತ್ರದ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು 66 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು 23,098 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಎಸ್.ವಿ. ಸಂಕನೂರ ಅವರು 33,711 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿಗಿಂತ 9,223 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ರೈತರು, ದಲಿತರು, ಎಸ್ಸಿ, ಎಸ್ಟಿ ಹಾಗೂ ಒಬಿಸಿ ಸೇರಿದಂತೆ ಎಲ್ಲ ವರ್ಗದ ಜನರಿಗೆ ಅನ್ಯಾಯ ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದ್ದು, ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರಗಳಿಗೆ ಅನುದಾನ ದೊರೆಯುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಸರ್ಕಾರದ ವಿರುದ್ಧ ಜನರಲ್ಲಿ ಆಕ್ರೋಶ ಹೆಚ್ಚಾಗಿದೆ ಎಂದರು.
ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಮಾಡಲಾಗಿದೆ. ರಾಜ್ಯದಲ್ಲಿ ಡ್ರಗ್ಸ್ ದಂಧೆ ಸೇರಿದಂತೆ ಹಲವು ಸಮಸ್ಯೆಗಳು ತಲೆದೋರಿವೆ. ಆದರೆ ಸರ್ಕಾರ ಸಮಸ್ಯೆಗಳನ್ನು ಪರಿಹರಿಸುವ ಬದಲು ಕೇವಲ ಹೇಳಿಕೆಗಳಿಗೆ ಸೀಮಿತವಾಗಿದೆ ಎಂದು ಆರೋಪಿಸಿದರು.
ಸರ್ಕಾರದ ವಿರುದ್ಧ ಜನರು ನೀಡಿರುವ ಈ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ಮೂರೂವರೆ ವರ್ಷಗಳ ಆಡಳಿತದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಚುನಾವಣೆಯ ಫಲಿತಾಂಶ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು, ಜನರು ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಎನ್. ರವಿಕುಮಾರ್ ಹೇಳಿದರು.
ನೂತನ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಮಾತನಾಡಿ, ಸಂವಿಧಾನದ 371ಜೆ ಅಡಿಯಲ್ಲಿ ನಿಯಮಗಳನ್ನು ರೂಪಿಸುವ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿತ್ತು. ಆದರೂ ಮೀಸಲಾತಿ ವಿಚಾರದಲ್ಲಿ ಸಮರ್ಪಕವಾಗಿ ಜಾರಿಗೊಳಿಸಲಿಲ್ಲ. ಕಳೆದ ಮೂರೂವರೆ ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿಸಿದರು.
ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲದಿದ್ದರೆ ಸರ್ಕಾರಕ್ಕೆ ಜನರ ತೀರ್ಪಿನ ಪರಿಣಾಮ ಎದುರಾಗಲಿದೆ. ಶಿಕ್ಷಕರ ಕ್ಷೇತ್ರದಿಂದ ಐದನೇ ಬಾರಿಗೆ ಗೆಲುವು ಸಾಧಿಸುವುದು ಸುಲಭವಲ್ಲ. ಶಿಕ್ಷಕರ ವಿವಿಧ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸಲು ಪ್ರಯತ್ನಿಸಿದ್ದೇನೆ. ಹೀಗಾಗಿ ಶಿಕ್ಷಕರು ಮತ್ತೊಮ್ಮೆ ತಮ್ಮನ್ನು ಆಯ್ಕೆ ಮಾಡಿದ್ದಾರೆ ಎಂದು ಅವರು ಹೇಳಿದರು.
ಜೆಡಿಎಸ್ ಮುಖಂಡ ದೊಡ್ಡಪ್ಪಗೌಡ ಪಾಟೀಲ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಅವಿನಾಶ್ ಜಾಧವ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಚಂದು ಪಾಟೀಲ, ಅಮರನಾಥ ಪಾಟೀಲ, ಅಶೋಕ್ ಬಗಲಿ, ನಾಸೀರ್ ಹುಸೇನ್ ಉಸ್ತಾದ್, ಅವ್ವಣ್ಣ ಮ್ಯಾಕೇರಿ, ಕೃಷ್ಣಾ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.