Shubhashaya News

ಸಿಎಂ ಡಿಕೆ ಶಿವಕುಮಾರ್ ತವರಲ್ಲೇ ಭ್ರಷ್ಟಾಚಾರ : 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಉಪತಹಸೀಲ್ದಾರ್ ಲೋಕಾಯುಕ್ತ ಬಲೆಗೆ

ರಾಜ್ಯದಲ್ಲಿ ಭ್ರಷ್ಟಾಚಾರದ ಹಾವಳಿ ಮುಂದುವರಿದಿದ್ದು, ಸಾರ್ವಜನಿಕರ ಕೆಲಸಗಳಿಗೆ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಗಳು ನಿಲ್ಲುತ್ತಿಲ್ಲ. ಇತ್ತೀಚೆಗಷ್ಟೇ ಹತ್ತು ರೂಪಾಯಿ ಲಂಚ ಕೇಳಿದರೂ ದೂರು ನೀಡುವಂತೆ ಸಿಎಂ ಡಿಕೆ ಶಿವಕುಮಾರ್  ಕರೆ ನೀಡಿದ್ದರೂ ಸಹ, ಅವರದ್ದೇ ತವರು ಜಿಲ್ಲೆಯಾದ ರಾಮನಗರದಲ್ಲಿ ಉಪ ತಹಶೀಲ್ದಾರ್ ಒಬ್ಬರು ಲಂಚ ಪಡೆಯುವಾಗಲೇ ಲೋಕಾಯುಕ್ತರ ಕೈಗೆ ಸಿಕ್ಕಿಬಾಕಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ರಾಮನಗರ ತಾಲೂಕಿನ ಕೂಟಗಲ್ ಹೋಬಳಿಯ ಉಪ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸೋಮೇಶ್ ಬಂಧಿತ ಆರೋಪಿಯಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಹೊಂಬೇಗೌಡನದೊಡ್ಡಿ ಗ್ರಾಮದ ರಾಕೇಶ್ ಎಂಬುವವರಿಗೆ ವಂಶವೃಕ್ಷ ಪ್ರಮಾಣಪತ್ರ ನೀಡುವುದಕ್ಕಾಗಿ ಸೋಮೇಶ್ ಒಟ್ಟು 15,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ 13,000 ರೂಪಾಯಿಗೆ ಒಪ್ಪಂದ ಮಾಡಿಕೊಂಡು, ತಮ್ಮ ಸರ್ಕಾರಿ ಕಚೇರಿಯಲ್ಲಿಯೇ ಹಣವನ್ನು ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್ ಕುಮಾರ್ ನೇತೃತ್ವದ ತಂಡವು ಈ ಕಾರ್ಯಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದೆ. ಕಚೇರಿಗೆ ದಿಢೀರ್ ಎಂಟ್ರಿ ಕೊಟ್ಟ ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿ ಸೋಮೇಶ್ ಕಕ್ಕಾಬಿಕ್ಕಿಯಾಗಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ಆರೋಪಿ ಸೋಮೇಶ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಕುರಿತು ತೀವ್ರ ವಿಚಾರಣೆ ಮುಂದುವರಿಸಿದ್ದಾರೆ.

 

Leave A Reply

Your email address will not be published.