ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದರು.
ಶ್ವಾಸಕೋಶದ ಸೋಂಕು ಉಲ್ಬಣ
ಕೆಲವು ದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಡಿ. ಸುಧಾಕರ್ ಅವರಿಗೆ ತದನಂತರ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಮೊದಲು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದ ಕಾರಣ, ನಾಲ್ಕು ದಿನಗಳ ಹಿಂದೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಪ್ರಸ್ತುತ ಸೋಂಕು ತೀವ್ರವಾಗಿರುವ ಕಾರಣ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ವೈದ್ಯರೊಂದಿಗೆ ಸಿಎಂ ಸಮಾಲೋಚನೆ
ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಸಚಿವರ ಆರೋಗ್ಯದ ಪ್ರಗತಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಸುಧಾಕರ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಿಎಂ, ಧೈರ್ಯ ತುಂಬಿದರು.
”ಸಚಿವರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ. ಅವರು ಶೀಘ್ರದಲ್ಲೇ ಗುಣಮುಖರಾಗುವ ಭರವಸೆಯಿದೆ,” ಎಂದು ಭೇಟಿಯ ಬಳಿಕ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಮುಖರ ಭೇಟಿ
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸೇರಿದಂತೆ ಹಲವು ಪ್ರಮುಖ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಗಣ್ಯರ ಭೇಟಿಯ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಸಚಿವರ ಶೀಘ್ರ ಚೇತರಿಕೆಗಾಗಿ ಅವರ ಬೆಂಬಲಿಗರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
Comments are closed.