Shubhashaya News

ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ : `CM’ ಹುದ್ದೆಗೆ ಸಿದ್ದರಾಮಯ್ಯ ನಾಳೆ ರಾಜೀನಾಮೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸುವಂತಹ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆದ ಸುದೀರ್ಘ ಹೈವೋಲ್ಟೇಜ್ ಸಭೆಯ ಬಳಿಕ ಸಿಎಂ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ನಾಳೆ ಬೆಳಗ್ಗೆ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಮಹತ್ವದ ಉಪಾಹಾರ ಸಭೆ ನಡೆಸಲಿದ್ದಾರೆ. ಈ ಸಭೆಯ ಬೆನ್ನಲ್ಲೇ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನ ನೀಡಲಾಗಿದ್ದು, ರಾಜ್ಯಸಭೆ ಸದಸ್ಯತ್ವದ ಆಫರ್ ನೀಡಲಾಗಿದೆ ಎಂದು ಹೇಳಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಅಧಿಕಾರ ಸಮತೋಲನ ಕಾಯ್ದುಕೊಳ್ಳಲು ಹೊಸ ಸೂತ್ರವೊಂದನ್ನು ಸಿದ್ಧಪಡಿಸಲಾಗಿದ್ದು, ಯತೀಂದ್ರ ಸಿದ್ದರಾಮಯ್ಯ ಹಾಗೂ ಪ್ರಿಯಾಂಕ್ ಖರ್ಗೆ ಸೇರಿದಂತೆ ಒಟ್ಟು ನಾಲ್ವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಪಟ್ಟ ನೀಡುವ ಭರವಸೆಯನ್ನು ಹೈಕಮಾಂಡ್ ನೀಡಿದೆ ಎನ್ನಲಾಗಿದೆ.

ಹಿಂದುಳಿದ ವರ್ಗಗಳ ಪ್ರಮುಖ ನಾಯಕರಾಗಿರುವ ಸಿದ್ದರಾಮಯ್ಯ ಅವರು ದೇಶದ ರಾಜಕಾರಣದಲ್ಲಿ ಸಕ್ರಿಯರಾಗಬೇಕು ಎಂದು ರಾಹುಲ್ ಗಾಂಧಿ ಆಶಿಸಿದ್ದಾರೆ. ಆದರೆ ತಮಗೆ ರಾಜ್ಯ ರಾಜಕಾರಣದಲ್ಲೇ ಆಸಕ್ತಿ ಇರುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಸೂಚನೆ ನೀಡಿದಾಗ,ತಾವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಉತ್ತರಿಸಿದ್ದು, ಅಂತಿಮವಾಗಿ ಯೋಚಿಸಲು 2-3 ದಿನಗಳ ಕಾಲಾವಕಾಶ ಕೇಳಿದ್ದಾರೆ.

ರಾಜ್ಯಸಭೆ ಚುನಾವಣೆ ಮುಗಿಯುತ್ತಿದ್ದಂತೆ ಡಿಸಿಎಂ ಹುದ್ದೆಗಳ ಸೃಷ್ಟಿ ಹಾಗೂ ಸದ್ಯದ ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆಯೂ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

Leave A Reply

Your email address will not be published.