ಜುಲೈ ೨೭ರಂದು ಆಳಂದದಲ್ಲಿ ಬರಗಾಲ ಘೋಷಣೆಗೆ ಬಿಜೆಪಿ ಪ್ರತಿಭಟನೆ:
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ
ಆಳಂದ: ಆಳಂದ ತಾಲೂಕನ್ನು ತಕ್ಷಣವೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ದಿ. ೨೭ ಜುಲೈ ೨೦೨೬, ಸೋಮವಾರ ಬೆಳಿಗ್ಗೆ ೧೧.೦೦ ಗಂಟೆಗೆ ಆಳಂದ ಬಸ್ ನಿಲ್ದಾಣದ ಎದುರು ಆಳಂದ ಮಂಡಲ ಭಾರತೀಯ ಜನತಾ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ತಿಳಿಸಿದ್ದಾರೆ.
ಈ ವರ್ಷ ಸಮರ್ಪಕ ಮಳೆಯಾಗದ ಕಾರಣ ಆಳಂದ ತಾಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ಕೆರೆ-ಕಟ್ಟೆಗಳು, ಹಳ್ಳ-ಕೊಳ್ಳಗಳು ನೀರಿಲ್ಲದೆ ಖಾಲಿಯಾಗುತ್ತಿವೆ. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಯೂ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಸರ್ಕಾರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ವಿಳಂಬ ಮಾಡುತ್ತಿರುವುದು ರೈತರಲ್ಲಿ ತೀವ್ರ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರತಿಭಟನೆಯ ಮೂಲಕ ಆಳಂದ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸುವುದು, ರೈತರಿಗೆ ಸೂಕ್ತ ಬರ ಪರಿಹಾರ, ಬೆಳೆಹಾನಿ ಪರಿಹಾರ, ಬಡ್ಡಿರಹಿತ ಸಾಲ ಸೌಲಭ್ಯ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಹೋರಾಟವು ರೈತರ ಹಾಗೂ ಸಾರ್ವಜನಿಕರ ಹಿತಾಸಕ್ತಿಗಾಗಿ ನಡೆಸಲಾಗುತ್ತಿದ್ದು, ರೈತರು, ಸಾರ್ವಜನಿಕರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಮಲ್ಲಿಕಾರ್ಜುನ ಕಂದಗೂಳೆ ಮನವಿ ಮಾಡಿದ್ದಾರೆ.