ಕಲಬುರಗಿ: ವಿಜಯಪುರ ಜಿಲ್ಲೆಯ ತಿಕೋಟಾದ ಶಾರದಾಂಬ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ವಿಳಂಬ ಹಾಗೂ ಆಡಳಿತಾತ್ಮಕ ಗೊಂದಲವನ್ನು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಸಮಿತಿಯ ಜಿಲ್ಲಾ ಸಂಚಾಲಕ ರಮೇಶ ದೇವಕರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಹಾಗೂ ಓಎಂಆರ್ ಉತ್ತರ ಪತ್ರಿಕೆಗಳನ್ನು ನಿಗದಿತ ಸಮಯಕ್ಕಿಂತ ತಡವಾಗಿ ವಿತರಿಸಲಾಗಿದೆ. ಅಲ್ಲದೆ, ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‌ಗಳ ಸಂಖ್ಯೆಗಳು ಪರಸ್ಪರ ಹೊಂದಿಕೆಯಾಗದಿರುವುದು ಪರೀಕ್ಷಾ ಪ್ರಕ್ರಿಯೆಯ ವಿಶ್ವಾಸಾರ್ಹತೆ ಕುರಿತು ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಆರೋಪಿಸಿದ್ದಾರೆ.
ಈ ಗೊಂದಲದಿಂದ ಅಭ್ಯರ್ಥಿಗಳು ಆತಂಕಕ್ಕೊಳಗಾಗಿದ್ದು, ತಮ್ಮ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಘಟನೆಗೆ ಆಕ್ರೋಶಗೊಂಡ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಹೊರಗೆ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಪೊಲೀಸ್ ನೇಮಕಾತಿಯಂತಹ ಮಹತ್ವದ ಪರೀಕ್ಷೆಗಳಲ್ಲಿ ಈ ರೀತಿಯ ನಿರ್ಲಕ್ಷ್ಯ ಮತ್ತು ಲೋಪಗಳು ಅಭ್ಯರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಸರ್ಕಾರ ಕೂಡಲೇ ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.