Shubhashaya News

ಕಲ್ಯಾಣ ಕರ್ನಾಟಕದ ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಅಸಮಾಧಾನ

ಕಲಬುರಗಿ: ರಾಜ್ಯ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಮುಸ್ಲಿಂ ಶಾಸಕರಿಗೆ ಪ್ರಾತಿನಿಧ್ಯ ನೀಡದಿರುವುದಕ್ಕೆ ಮುಸ್ಲಿಂ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷವು ಸಮುದಾಯದ ಬೇಡಿಕೆಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಅಫ್ಜಲ್ ಮೆಹಮೂದ್, ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮುಸ್ಲಿಂ ಶಾಸಕರೊಬ್ಬರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದ್ದು, ಇದು ಸಮುದಾಯಕ್ಕೆ ಮಾಡಿದ ದೊಡ್ಡ ಅನ್ಯಾಯವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ಹಾಗೂ ಹೈಕಮಾಂಡ್ ಮುಸ್ಲಿಂ ಸಮುದಾಯವನ್ನು ಕೇವಲ ಮತ ಬ್ಯಾಂಕ್ ಆಗಿ ಪರಿಗಣಿಸುತ್ತಿದ್ದಾರೆ ಎಂಬ ಭಾವನೆ ಮೂಡುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ ಮತ್ತು ಅಧಿಕಾರ ನೀಡುವಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲಿ ಬೀದರ್‌ನ ರಹೀಂ ಖಾನ್ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಈ ಬಾರಿ ಅವರನ್ನು ಅಥವಾ ಮಹಿಳಾ ಕೋಟಾದಡಿ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಅವರಿಗೆ ಸಚಿವ ಸ್ಥಾನ ನೀಡಬಹುದು ಎಂಬ ವಿಶ್ವಾಸವಿತ್ತು. ಆದರೆ ಕೊನೆಯ ಕ್ಷಣದಲ್ಲಿ ಯಾವುದೇ ಅವಕಾಶ ನೀಡದಿರುವುದು ಬೇಸರ ತಂದಿದೆ ಎಂದು ಹೇಳಿದರು.

ಸಮುದಾಯಕ್ಕೆ ಆಗಿರುವ ಅನ್ಯಾಯದ ಕುರಿತು ಕಾಂಗ್ರೆಸ್ ವರಿಷ್ಠರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ನಾಯಕರನ್ನು ಭೇಟಿ ಮಾಡಿ ಚರ್ಚಿಸುವ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮೌಲಾನಾ ಶರೀಫಸಾಬ್ ಮಜರಿ, ಆರೀಫ್ ಮನಿಯಾರ್, ಎಚ್.ಎಂ. ಜಾನಿ, ಮೆಹಬೂಬ್ ಅಲಿ, ಅಬ್ದುಲ್ ರವೂಫ್ ಖುರೇಷಿ, ಅಬ್ದುಲ್ ಖಾದರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Leave A Reply

Your email address will not be published.