ಕಲಬುರಗಿ: ದೇವದುರ್ಗ ತಾಲೂಕಿನ ಹದ್ದಿನಾಳ ಯುವಕನನ್ನು ಹತ್ಯೆಗೈದ ಆರೋಪಿಗಳನ್ನು ಬಂಧಿಸಿ, ಸಂತ್ರಸ್ಥ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಪುನರ್ವಸತಿ ಕಲ್ಲಿಸಿಕೊಡಬೇಕೆಂದು ಅಖಿಲ ಕರ್ನಾಟಕ ಬಸವ ಮಾದಾರ ಚೆನ್ನಯ್ಯ ಸಂಘದ ಅಧ್ಯಕ್ಷ ರುದ್ರಪ್ಪ ವಾಲೀಕಾರ (ರವಿ ವಾಲಿ) ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿ ಕಾರಿಯೊಬ್ಬರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ, ತ್ವರಿತಗತಿ ನ್ಯಾಯಾಲಯಕ್ಕೆ ವಿಚಾರಣೆ ವಹಿಸಬೇಕು. ಕಾಲಮಿತಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಬೇಕು. ಜೀವನೋಪಾಯಕ್ಕಾಗಿ 5 ಎಕರೆ ಕೃಷಿ ಜಮೀನು, ಕುಟುಂಬ ಸದಸ್ಯರೊಬ್ಬರಿಗೆ ಸರಕಾರಿ ನೌಕರಿ ನೀಡಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾದಿಗ ಸಮುದಾಯ ಮತ್ತು ಶೋಷಿತ ವರ್ಗಗಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾರ್ಯಪಡೆ ರಚನೆ ಸೇರಿ ನಾನಾ ಬೇಡಿಕೆ ಈಡೇರಿಸಬೇಕು ಎಂದರು.ದೇಶದಲ್ಲಿ
ದಿನೇ ದಿನೇ ಜಾತಿ ವೈಷಮ್ಯ ಹೆಚ್ಚಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದಲಿತರ ಮೇಲೆ ಕೋಲೆ, ಮಾರಣಾಂತಿಕ ಹಲ್ಲೆ ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರದಂತಹ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ರಾಜ್ಯದಲ್ಲಿದಲಿತ ಸಮುದಾಯದವರೇ ಗೃಹ ಸಚಿವರಾಗಿದ್ದರೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಈ ಪ್ರಕರಣವನ್ನು ತ್ವರಿತ ನ್ಯಾಯಾಲಯಕ್ಕೆ ಒಪ್ಪಿಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಹಾಗೆಯೇ ಕೊಲೆಯಾದ ವ್ಯಕ್ತಿಯ ಕುಟುಂಬಕ್ಕೆ ಸರಕಾರ ಸೂಕ್ತ ರಕ್ಷಣೆ ಹಾಗೂ ತಕ್ಷಣವೇ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.