Shubhashaya News

ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

ಮಕ್ಕಳ ಹಕ್ಕು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ

ಕಲಬುರಗಿ: ಜಿಲ್ಲೆಯಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಭಿಕ್ಷಾಟನೆ ಹಾಗೂ ಪೋಕ್ಸೋ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮನ್ವಯದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಮಕ್ಕಳ ಮೇಲ್ವಿಚಾರಣಾ ಸಮಿತಿ ಸಭೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮುಖ್ಯಮಂತ್ರಿ ಬಾಲಸೇವಾ ಯೋಜನೆ ಹಾಗೂ ಪಿ.ಎಂ. ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗಳ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಸರ್ಕಾರಿ ಹಾಗೂ ಸಂಘ-ಸಂಸ್ಥೆಗಳ ಮೂಲಕ ನಡೆಯುತ್ತಿರುವ ಬಾಲಮಂದಿರಗಳಿಗೆ ಸಂಬಂಧಿಸಿದ ಅಧಿಕಾರಿಗಳು ಪ್ರತಿ ತಿಂಗಳು ಕಡ್ಡಾಯವಾಗಿ ಭೇಟಿ ನೀಡಿ ಅಲ್ಲಿನ ನೈರ್ಮಲ್ಯ, ಭದ್ರತೆ ಹಾಗೂ ಮೂಲಸೌಕರ್ಯಗಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಮಾತನಾಡಿ, ಪೋಕ್ಸೋ ಪ್ರಕರಣಗಳಲ್ಲಿ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ 60 ದಿನಗಳ ಅವಧಿಯೊಳಗೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ವಿ. ಮಂಜುಳಾ ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 71 ಬಾಲ್ಯವಿವಾಹ, 22 ಬಾಲಕಾರ್ಮಿಕ, 16 ಪೋಕ್ಸೋ ಹಾಗೂ 14 ಮಕ್ಕಳ ಭಿಕ್ಷಾಟನೆ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಈಗಾಗಲೇ 198 ಮಕ್ಕಳನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಮಕ್ಕಳ ಸಹಾಯವಾಣಿಗೆ ಬಂದ 293 ಕರೆಗಳ ಪೈಕಿ 285 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. ವಿಶೇಷ ಕಾರ್ಯಾಚರಣೆಗಳ ಮೂಲಕ 22 ಬಾಲಕಾರ್ಮಿಕರು ಹಾಗೂ 13 ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಲಾಗಿದೆ. ಅಲ್ಲದೆ 80 ಬಾಲಕಿಯರು ಹಾಗೂ ಒಬ್ಬ ಬಾಲಕನ ಬಾಲ್ಯವಿವಾಹವನ್ನು ತಡೆಯಲಾಗಿದೆ ಎಂದು ಅವರು ವಿವರಿಸಿದರು.

ಆಸ್ಪತ್ರೆಗಳಲ್ಲಿ ಅಪ್ರಾಪ್ತರ ಗರ್ಭಧಾರಣೆ ಪ್ರಕರಣಗಳು ಕಂಡುಬಂದಲ್ಲಿ ಕಡ್ಡಾಯವಾಗಿ ಮೆಡಿಕೋ-ಲೀಗಲ್ ಕೇಸ್ ದಾಖಲಿಸಿ, ಆರ್.ಸಿ.ಎಚ್. ಪೋರ್ಟಲ್ ಹಾಗೂ ತಾಯಿ ಕಾರ್ಡ್ ಆಧಾರದ ಮೇಲೆ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೋಕ್ಸೋ ಹಾಗೂ ಬಾಲ್ಯವಿವಾಹ ಸಂತ್ರಸ್ತ ಮಕ್ಕಳಿಗೆ ತುರ್ತು ನೆರವು, ಎಚ್‌ಐವಿ ಸೋಂಕಿನಿಂದ ಬಳಲುತ್ತಿರುವ ಪೋಷಕರ ಮಕ್ಕಳಿಗೆ, ಸಂಕಷ್ಟದಲ್ಲಿರುವ ಮಕ್ಕಳಿಗೆ ಹಾಗೂ ಪ್ರಾಯೋಜಕತ್ವ ಯೋಜನೆಯಡಿ ನೆರವು ನೀಡಲಾಗುತ್ತಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಅನಾಥ ಮಕ್ಕಳು, ಕುಷ್ಠರೋಗ ಪೀಡಿತರ ಮಕ್ಕಳು ಹಾಗೂ ಸಂಕಷ್ಟದಲ್ಲಿರುವ ಮಕ್ಕಳ ಜೀವನಮಟ್ಟ ಸುಧಾರಿಸಲು ಪ್ರಾಯೋಜಕತ್ವ ಯೋಜನೆಯಡಿ 18 ವರ್ಷದೊಳಗಿನ ಮಕ್ಕಳಿಗೆ ಮಾಸಿಕ ₹4 ಸಾವಿರ ಹಾಗೂ ಬಾಲಗರ್ಭಿಣಿಯರಿಗೆ ₹6 ಸಾವಿರ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಲಾಯಿತು.

ಬಾಲಮಂದಿರದಲ್ಲಿರುವ ಮಕ್ಕಳಿಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಉಚಿತ ಪ್ರವೇಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. 18 ವರ್ಷ ಪೂರ್ಣಗೊಂಡ ಯುವಕರಿಗೆ ‘ಉಪ್ಕಾರ’ ಯೋಜನೆಯಡಿ ಮಾಸಿಕ ₹3,500 ನೆರವು ನೀಡಲಾಗುತ್ತಿದೆ. ಅನುಪಾಲನಾ ಗೃಹಗಳ ಮೂಲಕ 19 ಬಾಲಕಿಯರಿಗೆ ಪದವಿ ಶಿಕ್ಷಣ, ನರ್ಸಿಂಗ್ ಹಾಗೂ ಟೈಲರಿಂಗ್ ತರಬೇತಿ ನೀಡಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಬಾಲ ನ್ಯಾಯ ಮಂಡಳಿಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೇ, ಡಿಸಿಪಿ ಶಾಲೂ, ಪ್ರೊಬೇಷನರಿ ಐಎಎಸ್ ಅಧಿಕಾರಿ ಶ್ರೀಕರ್ ಮೋಘ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಂಕರಮ್ಮ ಡವಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಶರಣಪ್ಪ, ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave A Reply

Your email address will not be published.