ಬೆಳೆ ವಿಮೆ ಅನ್ಯಾಯ ಖಂಡಿಸಿ ಆಗಷ್ಟ್ ೧೦ರಂದು ಬಿಜೆಪಿ ಪ್ರತಿಭಟನೆ: ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ – ಮಲ್ಲಿಕಾರ್ಜುನ ಕಂದಗೂಳೆ ಮನವಿ
ಆಳಂದ ತಾಲೂಕಿಗೆ ಸಮರ್ಪಕ ಬೆಳೆ ವಿಮೆ ಮಂಜೂರಾಗದೆ ಸಾವಿರಾರು ರೈತರು ಸಂಕಷ್ಟಕ್ಕೆ ಸಿಲುಕಿರುವುದನ್ನು ಖಂಡಿಸಿ, ಭಾರತೀಯ ಜನತಾ ಪಕ್ಷದ ಆಳಂದ ಮಂಡಲ ವತಿಯಿಂದ ೨೦೨೬ರ ಆಗಸ್ಟ್ ೧೦, ಸೋಮವಾರ, ಬೆಳಿಗ್ಗೆ ೧೧ ಗಂಡೆಗೆ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾಲೂಕಿನಲ್ಲಿ ಅನೇಕ ಅರ್ಹ ರೈತರು ಬೆಳೆ ವಿಮೆ ಸೌಲಭ್ಯದಿಂದ ವಂಚಿತರಾಗಿದ್ದು, ರೈತರ ಅಹವಾಲುಗಳಿಗೆ ಸರ್ಕಾರ ಹಾಗೂ ಸಂಬAಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಬರ ಪರಿಸ್ಥಿತಿ ಹಾಗೂ ಬೆಳೆ ನಷ್ಟದಿಂದ ಕಂಗೆಟ್ಟಿರುವ ರೈತರಿಗೆ ಬೆಳೆ ವಿಮೆ ಜೀವನಾಡಿಯಾಗಿದ್ದು, ಅವರಿಗೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಈ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಳಂದ ತಾಲೂಕಿನ ಎಲ್ಲಾ ಗ್ರಾಮಗಳ ಬೆಳೆ ವಿಮೆಯಿಂದ ವಂಚಿತರಾದ ರೈತರು, ರೈತ ಸಂಘಟನೆಗಳ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಹಕ್ಕಿಗಾಗಿ ಧ್ವನಿ ಎತ್ತಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಪ್ರತಿಭಟನೆಯ ಮೂಲಕ ಬೆಳೆ ವಿಮೆಯಿಂದ ವಂಚಿತರಾದ ಎಲ್ಲ ಅರ್ಹ ರೈತರಿಗೆ ತಕ್ಷಣ ವಿಮೆ ಪರಿಹಾರ ಮಂಜೂರು ಮಾಡಬೇಕು, ರೈತರ ಅರ್ಜಿಗಳನ್ನು ಮರುಪರಿಶೀಲಿಸಿ ನ್ಯಾಯ ಒದಗಿಸಬೇಕು ಹಾಗೂ ಸರ್ಕಾರ ರೈತರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ರೈತರ ಹಿತಾಸಕ್ತಿಯ ಈ ಹೋರಾಟದಲ್ಲಿ ತಾಲೂಕಿನ ಪ್ರತಿಯೊಬ್ಬ ರೈತರು ಸಕ್ರಿಯವಾಗಿ ಪಾಲ್ಗೊಂಡು ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ಪ್ರಕಟಣೆಯಲ್ಲಿ ಕೋರಿದ್ದಾರೆ.