Shubhashaya News

ದೇಶವಿರೋಧಿ ಖಾತೆಗಳಿಗೆ ಪ್ರೋತ್ಸಾಹ ಆರೋಪ: ಓರ್ವ ಆರೋಪಿ ಬಂಧನ

ಕಲಬುರಗಿ: ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಪ್ರತಿಕ್ರಿಯೆ ನೀಡುವುದು ಹಾಗೂ ಅನುಮಾನಾಸ್ಪದ ಚಟುವಟಿಕೆಗಳಿಗೆ ಬೆಂಬಲ ನೀಡಿದ ಆರೋಪದ ಮೇರೆಗೆ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮೊಹಮ್ಮದ್ ಸಮೀರ್ (23) ಬಂಧಿತ ಆರೋಪಿ. ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ಮೂಲದ ಖಾತೆಗಳನ್ನು ಹಿಂಬಾಲಿಸುತ್ತಿರುವುದು, ಖಾತೆಗಳ ನಿರ್ವಾಹಕರೊಂದಿಗೆ ಸಂಪರ್ಕ ಹೊಂದಿರುವುದು ಹಾಗೂ ಪ್ರತಿಕ್ರಿಯೆಗಳನ್ನು ನೀಡುತ್ತಿರುವ ಕುರಿತು ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿನ ಅನುಮಾನಾಸ್ಪದ ಚಟುವಟಿಕೆಗಳ ಹಿನ್ನೆಲೆಯಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ವೇಳೆ ಓರ್ವ ವ್ಯಕ್ತಿ ಯಾವುದೇ ರೀತಿಯ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂಬುದು ತಿಳಿದುಬಂದಿದೆ. ಮತ್ತೋರ್ವನಾದ ಮೊಹಮ್ಮದ್ ಸಮೀರ್ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.

ಶಂಕಿತ ಉಗ್ರ ಎಂದು ಹೇಳಲಾಗದು:

ಬಂಧಿತ ಮೊಹಮ್ಮದ್ ಸಮೀರ್‌ನನ್ನು ಸದ್ಯಕ್ಕೆ ‘ಶಂಕಿತ ಉಗ್ರ’ ಎಂದು ಕರೆಯಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿನ ಆತನ ಚಟುವಟಿಕೆಗಳ ಕುರಿತು ತನಿಖೆ ಮುಂದುವರಿದಿದ್ದು, ವಿಚಾರಣೆಯ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿನ ಅನುಮಾನಾಸ್ಪದ ಖಾತೆಗಳು ಮತ್ತು ಅವುಗಳೊಂದಿಗೆ ಆರೋಪಿಯ ಸಂಪರ್ಕದ ಕುರಿತು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply

Your email address will not be published.