Shubhashaya News

ಕೆಕೆಆರ್‌ಟಿಸಿಗೆ ₹152 ಕೋಟಿ ವೆಚ್ಚದಲ್ಲಿ 400 ಹೊಸ ಬಸ್‌ಗಳ ಖರೀದಿಗೆ ಸಚಿವ ಸಂಪುಟ ಅನುಮೋದನೆ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) ₹152 ಕೋಟಿ ವೆಚ್ಚದಲ್ಲಿ 400 ನೂತನ ಬಸ್‌ಗಳನ್ನು ಖರೀದಿಸಲು ರಾಜ್ಯ ಸರ್ಕಾರದ ಮುಂಗಾರು ಅಧಿವೇಶನದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸರ್ಕಾರದ ಈ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿರುವ ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಎಂ.ವೈ. ಪಾಟೀಲ ಅವರು, ನಿಗಮದ ಪರವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಹಾಗೂ ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಇದರಿಂದ ನಿಗಮದ ಹಾಲಿ ಅನುಸೂಚಿಗಳ ಕಾರ್ಯಾಚರಣೆಗೆ ಅಗತ್ಯವಿರುವಷ್ಟು ಬಸ್‌ಗಳ ಲಭ್ಯತೆ ಇಲ್ಲದೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೆ ಒತ್ತಡ ಉಂಟಾಗಿತ್ತು.

ಈ ಸಮಸ್ಯೆಯನ್ನು ಮನಗಂಡು ನಿಗಮಕ್ಕೆ ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆಗೆ ಅಂತಿಮ ಅನುಮೋದನೆ ದೊರೆತಿದ್ದು, 400 ಹೊಸ ಬಸ್‌ಗಳ ಖರೀದಿಗೆ ಹಾದಿ ಸುಗಮವಾಗಿದೆ ಎಂದು ಅವರು ತಿಳಿಸಿದ್ದಾರೆ.

400 ಬಸ್‌ಗಳ ಖರೀದಿಗೆ ಅಗತ್ಯವಿರುವ ಒಟ್ಟು ₹152 ಕೋಟಿ ವೆಚ್ಚದಲ್ಲಿ ಶೇ.50ರಷ್ಟು ಮೊತ್ತವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ಉಳಿದ ಶೇ.50ರಷ್ಟು ಮೊತ್ತವನ್ನು ಕರ್ನಾಟಕ ಸರ್ಕಾರ ಭರಿಸಲಿದೆ. ಅನುದಾನವನ್ನು ಹಂತ ಹಂತವಾಗಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಹೊಸ ಬಸ್‌ಗಳ ಸೇರ್ಪಡೆಯಿಂದ ಕಲ್ಯಾಣ ಕರ್ನಾಟಕ ಭಾಗದ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಪ್ರಯಾಣಿಕರಿಗೆ ಮತ್ತಷ್ಟು ಸುಗಮ, ಸುರಕ್ಷಿತ ಮತ್ತು ಸಮರ್ಪಕ ಸಾರ್ವಜನಿಕ ಸಾರಿಗೆ ಸೇವೆ ಒದಗಿಸಲು ಸಾಧ್ಯವಾಗಲಿದೆ. ಬಸ್‌ಗಳ ಕೊರತೆಯಿಂದಾಗಿ ಎದುರಾಗುತ್ತಿದ್ದ ಸಮಸ್ಯೆಗಳಿಗೂ ಪರಿಹಾರ ದೊರೆಯಲಿದೆ ಎಂದು ಕೆಕೆಆರ್‌ಟಿಸಿ ಅಧ್ಯಕ್ಷರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.