ಕಲಬುರಗಿ: ದಿಲ್ಲಿಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ ಗೀತೆ’ಯ ಪೂರ್ಣ ಆವೃತ್ತಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದು ಖಂಡನೀಯ ಎಂದು ಭಾರತೀಯ ಜನತಾ ಪಾರ್ಟಿಯ ಕೈಗಾರಿಕಾ ಪ್ರಕೋಷ್ಟಕ ಸಹ ಸಂಚಾಲಕ ರಾದ ಮಲ್ಲಿಕಾರ್ಜುನ ಮರತೂರಕರ್ ಅವರು ಆರೋಪಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ‘ವಂದೇ ಮಾತರಂ ಗೀತೆ’ ಆರಂಭವಾಗಿದ್ದು,ಗೀತೆಯ ಪೂರ್ಣ ಆವೃತ್ತಿ ಮುಂದುವರಿಸುವುದಕ್ಕೆ ಸೋನಿಯಾ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಅವರೂ ಗೀತೆಯನ್ನು ನಿಲ್ಲಿಸುವಂತೆ ಸೂಚಿಸಿದಂತೆ ಕಂಡುಬಂದಿದೆ. ವಂದೇ ಮಾತರಂ ಗೀತೆಯ ಬಗ್ಗೆ ಕಾಂಗ್ರೆಸ್ ನಾಯಕರ ನಿಲುವು ಖಂಡನೀಯವಾಗಿದೆ. ರಾಷ್ಟ್ರಭಕ್ತಿ ಹಾಗೂ ರಾಷ್ಟ್ರೀಯ ಸಂಕೇತಗಳಿಗೆ ಗೌರವ ನೀಡುವ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.
ವಂದೇ ಮಾತರಂ ಕೇವಲ ಒಂದು ಗೀತೆಯಲ್ಲ,
ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಕೋಟ್ಯಂತರ ಭಾರತೀಯರಲ್ಲಿ ರಾಷ್ಟ್ರಭಕ್ತಿ ಮತ್ತು ದೇಶಾಭಿಮಾನದ ಭಾವನೆ ಮೂಡಿಸಿದ ಮಹತ್ವದ ರಾಷ್ಟ್ರೀಯ ಗೀತೆಯಾಗಿದೆ. ಇಂತಹ ಗೀತೆಗೆ ಅಗೌರವ ತೋರುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ ಎಂದು ಕಿಡಿಕಾರಿದರು.ವಂದೇ ಮಾತರಂ ಹಾಡುತ್ತಿದ್ದಾಗ ಕೈ ಸನ್ನೆ ಮೂಲಕ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ದೇಶದ ಪ್ರತಿಯೊಬ್ಬ ದೇಶಭಕ್ತನ ಭಾವನೆಗಳಿಗೆ ನೋವುಂಟು ಮಾಡಿದೆ. ಈ ಕುರಿತು ಕಾಂಗ್ರೆಸ್ ಹಿರಿಯ ನಾಯಕರು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು.
ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂಬ ಆರೋಪದ ಕುರಿತು ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು. ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆ ತರುವ ಘಟನೆಗಳು ಮರುಕಳಿಸದಂತೆ ವಹಿಸಬೇಕೆಂದು ಅವರು ಒತ್ತಾಯಿಸಿದರು.