ಕಲಬುರಗಿ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಧೀಮಂತ ನಾಯಕರು. ಶೋಷಿತರು ಹಾಗೂ ಹಿಂದುಳಿದ ಜನರ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆ ಇಂದಿಗೂ ಪ್ರಸ್ತುತವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಹೇಳಿದರು.
ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇವರಾಜ ಅರಸು ಅವರು ಧ್ವನಿಯಿಲ್ಲದವರಿಗೆ ಧ್ವನಿಯಾಗಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ಹಾಗೂ ಶಿಕ್ಷಣಕ್ಕೆ ಬಲವಾದ ತಳಹದಿ ನಿರ್ಮಿಸಿಕೊಟ್ಟರು. ಸಾಮಾಜಿಕ ನ್ಯಾಯದ ಆಶಯವನ್ನು ಆಡಳಿತದ ಮೂಲಕ ಸಾಕಾರಗೊಳಿಸಿದ ಅವರು ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿದರು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಬಡವರು ಹಾಗೂ ದುರ್ಬಲ ವರ್ಗಗಳಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದಾರೆ. ಈ ನಿಟ್ಟಿನಲ್ಲಿ ಅವರನ್ನೂ ರಾಜ್ಯದ ಮತ್ತೊಬ್ಬ ದೇವರಾಜ ಅರಸು ಎಂದು ಕರೆಯಬಹುದು ಎಂದು ಚಂದ್ರಿಕಾ ಪರಮೇಶ್ವರ ಹೇಳಿದರು.
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮಹಾಂತೇಶ ಕೌಲಗಿ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಹಾಗೂ ಸಾಮಾಜಿಕ ನ್ಯಾಯ ದೊರೆಯಬೇಕು ಎಂಬ ಆಶಯದೊಂದಿಗೆ ಹೋರಾಡಿದ ಮಹಾನ್ ನಾಯಕ ದೇವರಾಜ ಅರಸು. ಮೈಸೂರು ಜಿಲ್ಲೆಯ ಕಲ್ಲಹಳ್ಳಿಯಲ್ಲಿ ಜನಿಸಿದ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದರು ಎಂದರು.
ಭೂ ಸುಧಾರಣಾ ಕಾಯ್ದೆಗೆ ಕ್ರಾಂತಿಕಾರಿ ತಿದ್ದುಪಡಿ ತರುವುದರ ಜೊತೆಗೆ ಎಲ್.ಜಿ. ಹಾವನೂರು ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗ ರಚಿಸಿ, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಲ್ಲಿ ಅರಸು ಅವರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಗುಲ್ಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ದಯಾನಂದ ಅಗಸರ ವಿಶೇಷ ಉಪನ್ಯಾಸ ನೀಡಿ, “ದೇವರಾಜ ಅರಸು ಎನ್ನುವುದು ಕೇವಲ ಹೆಸರಲ್ಲ; ಅದು ಕರ್ನಾಟಕದ ಒಂದು ಯುಗ. ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಪ್ರಗತಿಗೆ ಅವರು ಹಾಕಿಕೊಟ್ಟ ಅಸ್ತಿಭಾರ ಎಂದೆಂದಿಗೂ ಸ್ಮರಣೀಯ” ಎಂದು ಮಾಜಿ ಸಚಿವ ಜೆ.ಎಸ್. ಪಾಟೀಲ ಅವರು ಹೇಳಿದ್ದನ್ನು ಸ್ಮರಿಸಿದರು.
ಶೋಷಿತ ವರ್ಗಗಳ ಧ್ವನಿಯಾಗಿ ಅರಸು ಅವರು ನಡೆಸಿದ ಹೋರಾಟ ಹಾಗೂ ಜಾರಿಗೆ ತಂದ ಜನಪರ ಸುಧಾರಣೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ದೂರದೃಷ್ಟಿಯ ಚಿಂತನೆಗಳು ಎಲ್ಲರಿಗೂ ಮಾದರಿಯಾಗಿವೆ ಎಂದು ಹೇಳಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ:
ಕಾರ್ಯಕ್ರಮದಲ್ಲಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಾದ ಅಶೋಕ್ ಡೈಮಂಡ್ ಹಾಗೂ ಡಾ. ಸಿ.ಸಿ. ನಿಂಗಣ್ಣ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಅದ್ಧೂರಿ ಭಾವಚಿತ್ರ ಮೆರವಣಿಗೆ:
ಸಮಾರಂಭಕ್ಕೂ ಮುನ್ನ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ್, ಡಿ. ದೇವರಾಜ ಅರಸು ಜಯಂತಿ ಆಚರಣೆ ಸಮಿತಿ ಅಧ್ಯಕ್ಷ ವಿನೋದ್ ಕುಮಾರ್ ಜೇನ್ವೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಂಗಮೇಶ್ವರ ಸೇರಿದಂತೆ ಅಧಿಕಾರಿಗಳು ಹಾಗೂ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ವಿವಿಧ ಜಾನಪದ ಕಲಾತಂಡಗಳ ಕಲಾ ವೈಭವದೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆಯು ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಸಮಾಪ್ತಿಗೊಂಡಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಂಗಮೇಶ್ವರ ಸ್ವಾಗತಿಸಿದರು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಜಗದೇವಪ್ಪ, ಸಮಿತಿ ಅಧ್ಯಕ್ಷ ವಿನೋದ್ ಕುಮಾರ್ ಜೇನ್ವೇರಿ, ಸಮುದಾಯದ ಮುಖಂಡರಾದ ಕುಮಾರ್ ಯಾದವ್, ಶೇಖರ್ ಸಿಂಗ್, ಅರುಣ್ ಕುಮಾರ್, ಮೈಬೂಬ್ ದರ್ವೇಸಿ, ಮಾಂತೇಶ್, ಶಿವಲಿಂಗಪ್ಪ, ಚಂದ್ರಶೇಖರ್ ಗುಂಡಳ್ಳಿ, ಮಲ್ಲೇಶ್ ಯಾದವ್, ಶ್ರೀಕಾಂತ್ ಬಿರಾದರ್, ವೆಂಕಟೇಶ್ ನೀರಡಗಿ, ನಾಗಪ್ಪ ಎಳವಾರ್, ಜ್ಯೋತಿ ಅಡಕಿ, ಧರ್ಮವೀರ್ ಪಟ್ಟಣ್, ಸ್ವಾಮಿ ದುರ್ಬುರೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ದೇವರಾಜ ಅರಸು ಅಭಿಮಾನಿಗಳ ಬಳಗದ ಸದಸ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.