ಕಲಬುರಗಿ: ನಗರದ ಹೊರವಲಯದ ಕಪನೂರ ಕೈಗಾರಿಕಾ ಪ್ರದೇಶದಲ್ಲಿರುವ ದಾಲ್ ಮಿಲ್‌ನಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಿ, ಮೂಲ ಚೀಲಗಳಿಂದ ತೆಗೆದು ಬಿಳಿ ಚೀಲಗಳಿಗೆ ತುಂಬಿ ಮಿಶ್ರಣ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 1,250 ಚೀಲ ಯೂರಿಯಾವನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ವಶಪಡಿಸಿಕೊಂಡ ಯೂರಿಯಾದ ಅಂದಾಜು ಮೌಲ್ಯ ₹3.72 ಲಕ್ಷ ಎಂದು ತಿಳಿದುಬಂದಿದೆ. ಪ್ರತಿ ಕೆ.ಜಿ. ಯೂರಿಯಾ ಗೊಬ್ಬರದ ಬೆಲೆ ಸುಮಾರು ₹266 ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ದಾಲ್ ಮಿಲ್‌ನಲ್ಲಿ ಅಕ್ರಮವಾಗಿ ರಸಗೊಬ್ಬರ ಸಂಗ್ರಹಿಸಿರುವುದು ಹಾಗೂ ಪರವಾನಗಿ ಇಲ್ಲದೆ ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಉಪ ಕೃಷಿ ನಿರ್ದೇಶಕ ಡಾ. ಬಾಲರಾಜ್ ರಂಗರಾವ್, ಜಾಗೃತ ದಳದ ಸಹಾಯಕ ಕೃಷಿ ನಿರ್ದೇಶಕಿ ಕವಿತಾ ಹಾಗೂ ಕೃಷಿ ಅಧಿಕಾರಿ ಜಹಾಂಗೀರ್ ಅವರನ್ನೊಳಗೊಂಡ ತಂಡ ದಾಳಿ ನಡೆಸಿತು.
ಘಟನೆಗೆ ಸಂಬಂಧಿಸಿದಂತೆ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಲ್ ಮಿಲ್‌ನಲ್ಲಿ ರಸಗೊಬ್ಬರ ಸಂಗ್ರಹಿಸಲು ಬಾಡಿಗೆಗೆ ಸ್ಥಳ ನೀಡಿರುವುದು ಕೂಡ ತಪ್ಪಾಗಿದೆ. ರಸಗೊಬ್ಬರ ಸಂಗ್ರಹಣೆಗೆ ಅವಕಾಶ ನೀಡಿದ ಮಿಲ್ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಕೃಷಿ ನಿರ್ದೇಶಕ ಡಾ. ಬಾಲರಾಜ್ ರಂಗರಾವ್ ತಿಳಿಸಿದ್ದಾರೆ.
ಸಬ್‌ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಪ್ರಕರಣದ ಕುರಿತು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.