ಬರ ಪಟ್ಟಿಯಿಂದ ಆಳಂದ ತಾಲೂಕು ಕೈಬಿಟ್ಟಿದ್ದಕ್ಕೆ ಹರ್ಷಾ ಎಸ್. ಗುತ್ತೇದಾರ ತೀವ್ರ ಆಕ್ರೋಶ
ಶಾಸಕ ಬಿ ಆರ್ ಪಾಟೀಲರ ನಿಷ್ಕಿçಯತೆಯೇ ಕಾರಣ
ಪ್ರಸಕ್ತ ವರ್ಷ ಮಳೆ ಕೊರತೆಯಿಂದ ಆಳಂದ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ಸರ್ಕಾರದ ಬರ ಪಟ್ಟಿಯಿಂದ ಆಳಂದ ತಾಲೂಕನ್ನು ಕೈಬಿಟ್ಟಿರುವುದು ಖಂಡನೀಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾ ಎಸ್. ಗುತ್ತೇದಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಳಂದ ತಾಲೂಕಿನ ಬಹುತೇಕ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಜಲಾಶಯಗಳು, ಕೆರೆ-ಕಟ್ಟೆಗಳು ಹಾಗೂ ಹಳ್ಳ-ಕೊಳ್ಳಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಬಿತ್ತನೆ ಮಾಡಿದ ಬೆಳೆಗಳು ಒಣಗಿ ಹೋಗಿವೆ. ಮಳೆ ಕೈಕೊಟ್ಟಿರುವ ಪರಿಣಾಮ ರೈತರ ಕೃಷಿ ವೆಚ್ಚವೂ ವ್ಯರ್ಥವಾಗುವ ಆತಂಕ ಎದುರಾಗಿದೆ ಎಂದು ಅವರು ತಿಳಿಸಿದ್ದಾರೆ.
ಆಳಂದ ತಾಲೂಕಿನ ಬರ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರಲು ಶಾಸಕ ಬಿ ಆರ್ ಪಾಟೀಲ ವಿಫಲರಾಗಿದ್ದಾರೆ. ಅವರ ರೈತಪರ ಕಾಳಜಿ ಕೇವಲ ಭಾಷಣದಲ್ಲಿದೆ ಹೊರತು ಕಾರ್ಯದಲ್ಲಿ ಇಲ್ಲ. ಬರದ ವಿಷಯದಲ್ಲಿ ಶಾಸಕರ ವಿಫಲತೆ ಎದ್ದು ಕಾಣುತ್ತಿದೆ ಎಂದು ತಿಳಿಸಿದ್ದಾರೆ.
ಸರ್ಕಾರ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಸ್ಥಳೀಯ ವಾಸ್ತವಾಂಶಗಳನ್ನು ಪರಿಗಣಿಸಬೇಕಿತ್ತು. ಆದರೆ ಆಳಂದ ತಾಲೂಕಿನ ರೈತರ ಸಂಕಷ್ಟವನ್ನು ಕಡೆಗಣಿಸಿ ಬರ ಪಟ್ಟಿಯಿಂದ ತಾಲೂಕನ್ನು ಹೊರಗಿಟ್ಟಿರುವುದು ರೈತ ವಿರೋಧಿ ನಿರ್ಧಾರವಾಗಿದೆ ಎಂದು ಅವರು ಆರೋಪಿಸಿದ್ದಾರೆ.
“ಆಳಂದ ತಾಲೂಕಿನ ರೈತರಿಗೆ ಮಳೆ ಕೊರತೆಯ ಪರಿಣಾಮ ಕಣ್ಣಿಗೆ ಕಾಣುವಂತಿದೆ. ಹೊಲಗಳಲ್ಲಿ ಬೆಳೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆಯ ಆತಂಕವೂ ಎದುರಾಗಿದೆ. ಸರ್ಕಾರ ಕಚೇರಿ ದಾಖಲೆಗಳಿಗೆ ಮಾತ್ರ ಸೀಮಿತವಾಗದೆ, ಗ್ರಾಮೀಣ ಪ್ರದೇಶಗಳಿಗೆ ತೆರಳಿ ವಾಸ್ತವ ಪರಿಸ್ಥಿತಿ ಪರಿಶೀಲಿಸಬೇಕು” ಎಂದು ಹರ್ಷಾ ಎಸ್. ಗುತ್ತೇದಾರ ಆಗ್ರಹಿಸಿದ್ದಾರೆ.
ತಕ್ಷಣವೇ ಆಳಂದ ತಾಲೂಕಿನ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ, ಜಲಮೂಲಗಳ ಸ್ಥಿತಿ ಹಾಗೂ ರೈತರ ಆರ್ಥಿಕ ನಷ್ಟದ ಕುರಿತು ಪುನರ್ ಸಮೀಕ್ಷೆ ನಡೆಸಿ, ಆಳಂದ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕು. ಅರ್ಹ ರೈತರಿಗೆ ಬೆಳೆ ನಷ್ಟ ಪರಿಹಾರ ಸೇರಿದಂತೆ ಸರ್ಕಾರದ ಬರ ಪರಿಹಾರ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಮರುಪರಿಶೀಲಿಸದಿದ್ದರೆ, ರೈತರೊಂದಿಗೆ ಸೇರಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಹರ್ಷಾ ಎಸ್. ಗುತ್ತೇದಾರ ಎಚ್ಚರಿಕೆ ನೀಡಿದ್ದಾರೆ.