Shubhashaya News

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ.1ರಿಂದ ಬಿಜೆಪಿ ಪಾದಯಾತ್ರೆ

ಲಿಂಗಸುಗೂರಿನಿಂದ ಬಳ್ಳಾರಿವರೆಗೆ 200 ಕಿ.ಮೀ. ಪಾದಯಾತ್ರೆ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಸೆಪ್ಟೆಂಬರ್ 1ರಿಂದ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ತಿಳಿಸಿದರು.

ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 200 ಕಿ.ಮೀ. ದೂರದ ಪಾದಯಾತ್ರೆ ಹತ್ತು ದಿನಗಳ ಕಾಲ ನಡೆಯಲಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯಗಳನ್ನು ಜನರ ಮುಂದಿಡುವ ಉದ್ದೇಶದಿಂದ ಈ ಹೋರಾಟ ರೂಪಿಸಲಾಗಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಸಂಸದರು ಹಾಗೂ ರಾಷ್ಟ್ರೀಯ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

187 ಕೋಟಿ ರೂ. ಅಕ್ರಮ ವರ್ಗಾವಣೆ ಆರೋಪ:

ವಾಲ್ಮೀಕಿ ಅಭಿವೃದ್ಧಿ ನಿಗಮದ ಸುಮಾರು ₹187 ಕೋಟಿ ಹಣ ಬಡವರು ಹಾಗೂ ದಲಿತರಿಗೆ ಸೇರಿದ್ದಾಗಿದೆ. ಫಲಾನುಭವಿಗಳಿಗೆ ತಲುಪಬೇಕಿದ್ದ ಹಣ ಅಕ್ರಮವಾಗಿ ವರ್ಗಾವಣೆಯಾಗಿದ್ದು, ವಿವಿಧ ಸೆಲ್ ಖಾತೆಗಳ ಮೂಲಕ ಹಣ ವರ್ಗಾವಣೆಯಾಗಿದೆ ಎಂಬ ಆರೋಪಗಳಿವೆ. ಇಂತಹ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ ಎಂದು ತೆಲ್ಕೂರ್ ಆಕ್ಷೇಪಿಸಿದರು.

ಕಾಂಗ್ರೆಸ್ ಸರ್ಕಾರ ರೈತರು, ದಲಿತರು, ಯುವಕರು ಹಾಗೂ ಮಹಿಳೆಯರ ವಿರೋಧಿಯಾಗಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಮೂರು ವರ್ಷಗಳ ಆಡಳಿತದಲ್ಲಿ ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದೆ. ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ಕಾರ ವಿಫಲವಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶವನ್ನು ಸರ್ಕಾರ ನಿರ್ಲಕ್ಷಿಸಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದಲ್ಲದೆ, ಅರ್ಹರಿಗೆ ಮುಂಬಡ್ತಿಯನ್ನೂ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.

‘ನಿರಪರಾಧಿ ಎನ್ನುವುದಾದರೆ ತನಿಖೆಯಲ್ಲಿ ಸಾಬೀತುಪಡಿಸಲಿ’

ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ನಾಗೇಂದ್ರ ಅವರು ನಿರಪರಾಧಿಯಾಗಿದ್ದರೆ ಈ ಹಿಂದೆ ಸಚಿವ ಸ್ಥಾನಕ್ಕೆ ಏಕೆ ರಾಜೀನಾಮೆ ನೀಡಿದ್ದರು ಎಂದು ಪ್ರಶ್ನಿಸಿದರು. ತಮ್ಮ ಮೇಲಿನ ಆರೋಪಗಳಿಂದ ಅವರು ನಿರಪರಾಧಿ ಎಂದು ಸಾಬೀತಾದ ಬಳಿಕ ಸಚಿವ ಸ್ಥಾನ ನೀಡುವುದಕ್ಕೆ ಆಕ್ಷೇಪವಿಲ್ಲ. ಅಗತ್ಯವಿದ್ದರೆ ಸಚಿವರನ್ನಷ್ಟೇ ಅಲ್ಲ, ಮುಖ್ಯಮಂತ್ರಿಯನ್ನಾಗಿಯೂ ಮಾಡಲಿ ಎಂದು ವ್ಯಂಗ್ಯವಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶರಣಪ್ಪ ತಳವಾರ್, ಶಿವಯೋಗಿ ನಾಗನಹಳ್ಳಿ, ಮಹದೇವ ಬೆಳಮಗಿ, ಚಂದ್ರಶೇಖರ್ ಪರಸರೆಡ್ಡಿ, ಸಂತೋಷ್ ಹಾದಿಮನಿ, ಆನಂದ ಪಾಟೀಲ್ ಕೊರಳ್ಳಿ ಹಾಗೂ ಬಾಬುರಾವ್ ಹಾಗರಗುಂಡಗಿ ಉಪಸ್ಥಿತರಿದ್ದರು.

Leave A Reply

Your email address will not be published.