Shubhashaya News

‘ರೈತರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರ–ಶಾಸಕ; ಜನರೇ ತಕ್ಕ ಪಾಠ ಕಲಿಸುವರು’

ಬಿಜೆಪಿಯಿಂದ ರೈತ ಆಕ್ರೋಶ ಪಾದಯಾತ್ರೆ

ಆಳಂದ: ಪಟ್ಟಣದ ಬಸ್ ನಿಲ್ದಾಣ ಮುಂಭಾಗದ ಹೆದ್ದಾರಿಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರೈತ ಆಕ್ರೋಶ ಪಾದಯಾತ್ರೆ ಬಹಿರಂಗಸಭೆಯಲ್ಲಿ ಮಾಜಿ ಶಾಸಕ ಸುಭಾಷ ಗುತ್ತೇದಾರ ಸೇರಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಆಳಂದ: ಕ್ಷೇತ್ರದ ರೈತರು ಹಾಗೂ ಜನಸಾಮಾನ್ಯರ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಮತ್ತು ಕ್ಷೇತ್ರದ ಶಾಸಕರು ಸಂಪೂರ್ಣ ವಿಫಲರಾಗಿದ್ದಾರೆ. ರೈತರ ಸಂಕಷ್ಟಕ್ಕೆ ನೆರವಾಗಬೇಕಾದ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಇದಕ್ಕೆ ಜನರೇ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಸುಭಾಷ ಗುತ್ತೇದಾರ ವಾಗ್ದಾಳಿ ನಡೆಸಿದರು.
ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಗಡಿಭಾಗದ ಖಜೂರಿಯಿಂದ ಆಳಂದ ಪಟ್ಟಣದವರೆಗೆ ೧೫ ಕಿ.ಮೀ. ವರೆಗೆ ಹಮ್ಮಿಕೊಂಡಿದ್ದ ರೈತ ಆಕ್ರೋಶ ಪಾದಯಾತ್ರೆ ನಡೆದು ಪಟ್ಟಣದ ಬಸ್ ನಿಲ್ದಾಣದ ಎದುರು ನಡೆದ ಪ್ರತಿಭಟನಾ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು
ಆಳಂದ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ರೈತರು ಬಿತ್ತನೆಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮಾಡಿರುವ ಸಾಲದ ಹೊರೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕಿತ್ತು. ಆದರೆ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಆಳಂದನ್ನು ಸೇರಿಸದೆ ರೈತರ ಸಂಕಷ್ಟವನ್ನು ಕಡೆಗಣಿಸಿದೆ ಎಂದು ಅವರು ಆರೋಪಿಸಿದರು.
‘ಆಳಂದ ರೈತರ ಕಣ್ಣೀರು ಸರ್ಕಾರಕ್ಕೆ ಕಾಣುತ್ತಿಲ್ಲವೇ?’ ಎಂದು ಪ್ರಶ್ನಿಸಿದ ಗುತ್ತೇದಾರ, ತಾಲೂಕಿನಲ್ಲಿ ಮಳೆ ಕೊರತೆ ಹಾಗೂ ಬೆಳೆ ನಷ್ಟದ ವಾಸ್ತವ ಸ್ಥಿತಿಯನ್ನು ಸರ್ಕಾರ ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಕಚೇರಿಯಲ್ಲಿ ಕುಳಿತುಕೊಂಡು ಬರದ ಪರಿಸ್ಥಿತಿಯನ್ನು ನಿರ್ಧರಿಸುವ ಬದಲು ಗ್ರಾಮಗಳಿಗೆ ತೆರಳಿ ರೈತರ ಹೊಲಗಳ ಸ್ಥಿತಿ ಅರಿಯಬೇಕು ಎಂದು ಆಗ್ರಹಿಸಿದರು.
ಕಳೆದ ಸಾಲಿನಲ್ಲಿ ತಾಲೂಕಿನ ಆರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ರೈತರು ಬೆಳೆ ವಿಮೆ ಪಾವತಿಸಿದ್ದರೂ ಎರಡನೇ ಕಂತಿನ ವಿಮಾ ಹಣ ಇನ್ನೂ ಕೈ ಸೇರಿಲ್ಲ. ಬೆಳೆ ನಷ್ಟದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ವಿಮಾ ಪರಿಹಾರವೇ ದೊಡ್ಡ ಆಸರೆಯಾಗಬೇಕಿತ್ತು. ಆದರೆ ಹಣ ಬಿಡುಗಡೆ ವಿಳಂಬವಾಗಿರುವುದರಿAದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ರೈತರಿಗೆ ಪರಿಹಾರ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಗುತ್ತೇದಾರ ಆರೋಪಿಸಿದರು.
ರೈತರ ಪರವಾಗಿ ಸದನದಲ್ಲಿ ಹಾಗೂ ಸರ್ಕಾರದ ಮುಂದೆ ಧ್ವನಿ ಎತ್ತಬೇಕಾದ ಕ್ಷೇತ್ರದ ಶಾಸಕರು ರೈತರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಕ್ಷೇತ್ರದ ಜನರ ಮೂಲಭೂತ ಸಮಸ್ಯೆಗಳಾದ ಬರ, ಬೆಳೆ ನಷ್ಟ, ಬೆಳೆ ವಿಮೆ, ನೀರಾವರಿ, ರಸ್ತೆ, ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳು ಇನ್ನೂ ಬಗೆಹರಿಯದೆ ಉಳಿದಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಆಡಳಿತದಿಂದಾಗಿ ಕ್ಷೇತ್ರದ ಜನರು ಬೇಸರಗೊಂಡಿದ್ದಾರೆ ಎಂದು ಹೇಳಿದರು.
ರೈತರು ಬೆಳೆದ ಬೆಳೆಗೆ ಬೆಲೆ ಇಲ್ಲ, ಮಳೆ ಇಲ್ಲದೆ ಬೆಳೆ ಉಳಿಯುತ್ತಿಲ್ಲ, ಬೆಳೆ ವಿಮೆಯ ಹಣ ಸಕಾಲಕ್ಕೆ ಬರುತ್ತಿಲ್ಲ. ಮತ್ತೊಂದೆಡೆ ಕೃಷಿಗಾಗಿ ಮಾಡಿದ ಸಾಲದ ಹೊರೆ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಹೇಗೆ ಬದುಕಬೇಕು? ಎಂದು ಸರ್ಕಾರವನ್ನು ಪ್ರಶ್ನಿಸಿದ ಅವರು, ರೈತರ ಸಮಸ್ಯೆಗಳನ್ನು ರಾಜಕೀಯ ದೃಷ್ಟಿಯಿಂದ ನೋಡದೆ ಮಾನವೀಯ ನೆಲೆಯಲ್ಲಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಆಳಂದ ತಾಲೂಕನ್ನು ತಕ್ಷಣ ಬರಪೀಡಿತ ತಾಲೂಕು ಎಂದು ಘೋಷಿಸಬೇಕು. ಬರದಿಂದ ಹಾನಿಗೊಳಗಾದ ಬೆಳೆಗಳ ಸಮಗ್ರ ಸಮೀಕ್ಷೆ ನಡೆಸಿ ಅರ್ಹ ರೈತರಿಗೆ ಪರಿಹಾರ ನೀಡಬೇಕು. ಬಾಕಿ ಇರುವ ಬೆಳೆ ವಿಮೆಯ ಎರಡನೇ ಕಂತಿನ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ರೈತರಿಗೆ ಬೀಜ, ರಸಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ನೆರವು ಒದಗಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.
‘ರೈತರ ನೋವನ್ನು ಕಡೆಗಣಿಸಿ ಯಾವುದೇ ಸರ್ಕಾರ ಹೆಚ್ಚು ದಿನ ಅಧಿಕಾರ ನಡೆಸಲು ಸಾಧ್ಯವಿಲ್ಲ. ರೈತರ ತಾಳ್ಮೆಯನ್ನು ಪರೀಕ್ಷಿಸಬಾರದು. ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು’ ಎಂದು ಗುತ್ತೇದಾರ ಎಚ್ಚರಿಕೆ ನೀಡಿದರು.
ಬೆಳಗಿನ ಜಾವ ಖಜೂರಿಯಿಂದ ಆರಂಭವಾದ ಪಾದಯಾತ್ರೆಯಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಹಷಾನಂದ ಗುತ್ತೇದಾರ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿ ರೈತರ ಪರ ಘೋಷಣೆಗಳನ್ನು ಕೂಗುತ್ತಾ ಆಳಂದ ಪಟ್ಟಣದತ್ತ ಆಗಮಿಸಿದ್ದರು. ಬಳಿಕ ಬಸ್ ನಿಲ್ದಾಣದ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಹಸೀಲ್ದಾರಗೆ ಮನವಿಸಿ ಸಲ್ಲಿಸಲಾಯಿತು.

Leave A Reply

Your email address will not be published.