ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿಯ ವತಿಯಿಂದ ಶುಕ್ರವಾರ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಎತ್ತಿನ ಗಾಡಿಗಳ ಮೂಲಕ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಆನಂದ ದೊಡ್ಡಮನಿ, ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳು ಹಿನ್ನಡೆ ಕಂಡಿದ್ದು, ರೈತರ ಬದುಕು ದುಸ್ತರವಾಗಿದೆ. ಸರ್ಕಾರ ಕೂಡಲೇ ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಬರದಿಂದ ತೊಂದರೆಗೊಳಗಾದ ರೈತರಿಗೆ ಬೆಳೆ ನಷ್ಟ ಪರಿಹಾರ, ಕುಡಿಯುವ ನೀರು ಹಾಗೂ ಅಗತ್ಯ ನೆರವು ಸೇರಿದಂತೆ ಸರ್ಕಾರದಿಂದ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪ್ರವೀಣ ಕಟ್ಟಿಮನಿ, ಮಹೇಶ ಕಾಶಿ, ಶಂಭುಲಿoಗ ಕುಲಕರ್ಣಿ, ವೆಂಕಟೇಶ ರಾಠೋಡ, ಅಪ್ಪು, ಅಬ್ದುಲ್, ಮೌನೇಶ್, ಎಲ್ಲಪ್ಪ, ಚಂದ್ರ, ಕವಿತಾ, ಶರಣಮ್ಮ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.