ಕಲಬುರಗಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು “ಇಂಡಿಯನ್ ಎಕ್ಸ್‌ಪ್ರೆಸ್” ಸೆ.23ರಂದು ಪ್ರಕಟಿಸಿರುವ ವರದಿಗಳು ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಸಾಂಸ್ಥಿಕ ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಆರೋಪಿಸಿದೆ.
ಈ ಕುರಿತಾಗಿ ಪತ್ರಿಕಾ ಪ್ರಕಟಣೆ ನೀಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಎಸ್ಐಆರ್ ಪ್ರಕ್ರಿಯೆ ಆರಂಭವಾದಾಗಿನಿಂದ ಸಿಪಿಐ(ಎಂ), ವಿವಿಧ ವಿರೋಧ ಪಕ್ಷಗಳು ಹಾಗೂ ನಾಗರಿಕ ಸಮಾಜ ಸಂಘಟನೆಗಳು ವ್ಯಕ್ತಪಡಿಸುತ್ತಿರುವ ಅನುಮಾನಗಳು ಮತ್ತು ಕಳವಳಗಳಿಗೆ ಈ ವರದಿಗಳು ಮತ್ತಷ್ಟು ಬಲ ನೀಡಿವೆ ಎಂದು ಹೇಳಿದ್ದಾರೆ.
ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ SIRಗೆ ಸಂಬಂಧಿಸಿದ ಹಲವು ನಿರ್ಧಾರಗಳಿಗೆ ಆಕ್ಷೇಪಣೆ ದಾಖಲಿಸಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಕಾನೂನಿನ ಪ್ರಕಾರ ಚುನಾವಣಾ ಆಯುಕ್ತರು ಸಮಾನ ಸ್ಥಾನಮಾನ ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯವನ್ನು ಬಹುಮತ ಅಥವಾ ಸರ್ವಾನುಮತದ ಮೂಲಕ ಬಗೆಹರಿಸಬೇಕಾಗಿದೆ. ಆದರೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸಹೋದ್ಯೋಗಿಗಳು ವ್ಯಕ್ತಪಡಿಸಿದ ಆಕ್ಷೇಪಣೆಗಳನ್ನು ಕಡೆಗಣಿಸಿ ನಿರ್ಧಾರಗಳನ್ನು ಮುಂದುವರಿಸಿದ್ದಾರೆ ಎಂದು ಆರೋಪ ಮಾಡಿದರು.
ಚುನಾವಣಾ ಆಯೋಗದ ನಿಷ್ಪಕ್ಷಪಾತತೆ ಮತ್ತು ವಿಶ್ವಾಸಾರ್ಹತೆ ಕುರಿತು ಸಾರ್ವಜನಿಕರಲ್ಲಿ ಪ್ರಶ್ನೆಗಳು ಮೂಡಿದ್ದು, ಇದಕ್ಕೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯುವ ಹಕ್ಕಿಲ್ಲ . ಕೂಡಲೇ ಎಸ್ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.
ಚುನಾವಣಾ ಆಯೋಗದ ಸಮಗ್ರತೆ ಹಾಗೂ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಪುನಃಸ್ಥಾಪಿಸುವ ಅಗತ್ಯವಿದೆ. ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಪಾರದರ್ಶಕತೆ ಖಚಿತಪಡಿಸಲು ಪ್ರಸ್ತುತ ಶಾಸನವನ್ನು ರದ್ದುಪಡಿಸಿ, ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಒಳಗೊಂಡ ಆಯ್ಕೆ ಸಮಿತಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಆಧರಿಸಿ ಹೊಸ ಶಾಸನ ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.