ಹೊಸ ಆವಿಷ್ಕಾರಗಳತ್ತ ಆಸಕ್ತಿ ವಹಿಸಿ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್
ಶರಣಬಸವೇಶ್ವರ ವಿಜ್ಞಾನ ಕಾಲೇಜಿನಲ್ಲಿ ಸೈನ್ಸ್ ಅಕಾಡೆಮಿ, ಪ್ಲಾಟಿನಂ ಜುಬಿಲಿ ಸಂಭ್ರಮ:
ಕಲಬುರಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ, ಸಂಶೋಧನಾ ಪ್ರವೃತ್ತಿ ಹಾಗೂ ಹೊಸ ಆವಿಷ್ಕಾರಗಳತ್ತ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಹೇಳಿದರು.
ನಗರದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸೈನ್ಸ್ ಅಕಾಡೆಮಿ ಹಾಗೂ ಕಾಲೇಜಿನ ಪ್ಲಾಟಿನಂ ಜುಬಿಲಿ ಆಚರಣೆಯ ಅಂಗವಾಗಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಜ್ಞಾನ ಶಿಕ್ಷಣವು ಕೇವಲ ಪರೀಕ್ಷೆ ಹಾಗೂ ಅಂಕ ಗಳಿಕೆಗೆ ಸೀಮಿತವಾಗದೆ, ಸಮಾಜ ಎದುರಿಸುತ್ತಿರುವ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳುವ ದಿಸೆಯಲ್ಲಿ ಸಾಗಬೇಕು. ವಿದ್ಯಾರ್ಥಿಗಳು ಪ್ರಯೋಗಶೀಲತೆ, ಪ್ರಶ್ನಿಸುವ ಮನೋಭಾವ ಮತ್ತು ಸಂಶೋಧನಾ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಶರಣಬಸವೇಶ್ವರ ವಿಜ್ಞಾನ ಕಾಲೇಜು ಹಲವು ದಶಕಗಳಿಂದ ವಿಜ್ಞಾನ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದು, ಪ್ಲಾಟಿನಂ ಜುಬಿಲಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಕಾಲೇಜಿನ ಹಳೆಯ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವುದು ಸಂಸ್ಥೆಯ ಶೈಕ್ಷಣಿಕ ಪರಂಪರೆಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.
ವಿಶ್ರಾಂತ ಕುಲಪತಿ ಶರಣಪ್ಪ ವಿ. ಹಲ್ಸೆ ಮಾತನಾಡಿ, ಬಸವಣ್ಣನವರ ‘ಕಾಯಕವೇ ಕೈಲಾಸ’ ತತ್ವದಂತೆ ಪ್ರತಿಯೊಬ್ಬ ವಿದ್ಯಾರ್ಥಿಯೂ ನಿರಂತರ ಪರಿಶ್ರಮ ಮತ್ತು ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. “ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ” ಎಂಬ ಧ್ಯೇಯದೊಂದಿಗೆ ಸತತ ಪ್ರಯತ್ನ ನಡೆಸಿದಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು. ಶಿಕ್ಷಕರೂ ಕಾಯಕನಿಷ್ಠೆ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಿದಾಗ ಉತ್ತಮ ಶಿಕ್ಷಕರಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ್ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ. ರಾಮಕೃಷ್ಣ ರೆಡ್ಡಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಡಾ. ಪ್ರದೀಪ್ ಕುಮಾರ್ ಡಿ., ಕಾರ್ಯಕ್ರಮದ ನಿರ್ವಾಹಕ ಡಾ. ರಮೇಶ್ ಕೆ., ಶಿಕ್ಷಕ ಕಾರ್ಯದರ್ಶಿ ಡಾ. ಬಾಲಾಜಿ ಬಿರಾದರ್ ಸೇರಿದಂತೆ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
2025ನೇ ಸಾಲಿನಲ್ಲಿ ಕಾಲೇಜಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ನಗದು ಬಹುಮಾನ ಹಾಗೂ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಪ್ರಥಮ ಸ್ಥಾನ ಪಡೆದ ಕುಮಾರಿ ಮಹಾದೇವಿ ಅವರಿಗೆ ಅಪ್ಪಾಜಿ ಅವರ ಹೆಸರಿನ ಪ್ರಶಸ್ತಿಯೊಂದಿಗೆ 21,000, ದ್ವಿತೀಯ ಸ್ಥಾನ ಪಡೆದ ಕುಮಾರಿ ದಿವ್ಯಜ್ಯೋತಿ ಅವರಿಗೆ ಅವ್ವಾಜಿ ಅವರ ಹೆಸರಿನ ಪ್ರಶಸ್ತಿಯೊಂದಿಗೆ 15,000, ತೃತೀಯ ಸ್ಥಾನ ಪಡೆದ ಕುಮಾರಿ ಸಂಜನಾ ಅವರಿಗೆ ಪೂಜ್ಯ ದೊಡ್ಡಪ್ಪ ಅಪ್ಪ ಅವರ ಹೆಸರಿನ ಪ್ರಶಸ್ತಿಯೊಂದಿಗೆ 11,000 ನಗದು ಬಹುಮಾನ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಬಹುಮಾನಗಳನ್ನು ವಿತರಿಸಲಾಯಿತು.
ಧರ್ಮರಾವ್ ಅಬ್ಜಲ್ಪುರ್ಕರ್ ಜ್ಞಾಪಕಾರ್ಥ ಪ್ರಶಸ್ತಿಯನ್ನು ತೃತೀಯ ಬಿ.ಎಸ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಮಹಾದೇವಿ ಅವರಿಗೆ, ಬಿ.ಪಿ. ಸಜ್ಜನ್ ಜ್ಞಾಪಕಾರ್ಥ ಪ್ರಶಸ್ತಿಯನ್ನು ಸಸ್ಯಶಾಸ್ತ್ರ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಸಿಂಧು ಎಸ್.ಬಿ. ಅವರಿಗೆ, ಜಿ.ಎಸ್. ಮುನ್ನೋಳ್ಳಿ ಜ್ಞಾಪಕಾರ್ಥ ಪ್ರಶಸ್ತಿಯನ್ನು ಗಣಿತ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಮಹಾದೇವಿ ಅವರಿಗೆ ಹಾಗೂ ಮಹಾಂತಪ್ಪ ಅಲ್ಲದ್ ಜ್ಞಾಪಕಾರ್ಥ ಪ್ರಶಸ್ತಿಯನ್ನು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿ ಸಾಕ್ಷಿ ವಿಠ್ಠಲ್ ಅವರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪುರಸ್ಕೃತರಿಗೆ ತಲಾ 2,000 ನಗದು ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮವನ್ನು ರಾಸಾಯನಶಾಸ್ತ್ರ ವಿಭಾಗದ ಡಾ. ಅಶ್ವಿನಿ ನಾಯಕ್ ನಿರೂಪಿಸಿದರು. ಕುಮಾರಿ ರಾಜಶ್ರೀ ಪ್ರಾರ್ಥನಾ ಗೀತೆ ಹಾಡಿದರು. ಡಾ. ರಮೇಶ್ ಕೆ.ಬಿ. ಅತಿಥಿಗಳನ್ನು ಸ್ವಾಗತಿಸಿದರು. ಡಾ. ಬಸವರಾಜೇಶ್ವರಿ ಇಂದೂರು ಹಾಗೂ ಡಾ. ಎಸ್.ಎ. ಮಾಲಿ ಪಾಟೀಲ್ ಅತಿಥಿಗಳನ್ನು ಪರಿಚಯಿಸಿದರು.
ಐಕ್ಯೂಎಸಿ ಸಂಯೋಜಕ ಡಾ. ಪ್ರದೀಪ್ ಕುಮಾರ್ ಡಿ. ಅವರು ವಿದ್ಯಾರ್ಥಿಗಳ ಸಾಧನೆ ಹಾಗೂ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಮತ್ತು ಗಣ್ಯರು ಭಾಗವಹಿಸಿದ್ದರು.