Shubhashaya News

ಎನ್‌ಎಸ್‌ಎಸ್‌ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುತ್ತದೆ: ಡಾ. ರಾಜಶೇಖರ ಬೀರನಳ್ಳಿ

ಕಲಬುರಗಿ: ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್‌) ಕೇವಲ ಸಮಾಜ ಸೇವೆಯ ಕಾರ್ಯಕ್ರಮವಲ್ಲ. ವಿದ್ಯಾರ್ಥಿಗಳಲ್ಲಿ ಸೇವೆ, ಶಿಸ್ತು, ಜವಾಬ್ದಾರಿ, ನಾಯಕತ್ವ ಹಾಗೂ ದೇಶಭಕ್ತಿಯ ಮನೋಭಾವವನ್ನು ಬೆಳೆಸುವ ಮಹತ್ವದ ಚಳವಳಿಯಾಗಿದೆ ಎಂದು ಹೈಕ ಶಿಕ್ಷಣ ಸಂಸ್ಥೆಯ ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಾಜಶೇಖರ ಬೀರನಳ್ಳಿ ಹೇಳಿದರು.

ನಗರದ ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ವತಿಯಿಂದ ಆಯೋಜಿಸಿದ್ದ ಎನ್‌ಎಸ್‌ಎಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

“ನಾನಲ್ಲ, ನೀನು” ಎಂಬ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಎನ್‌ಎಸ್‌ಎಸ್‌ನ ಪ್ರಮುಖ ಉದ್ದೇಶವಾಗಿದೆ. ಸಮಾಜದಿಂದ ನಾವು ಪಡೆಯುವುದಕ್ಕಿಂತ ಸಮಾಜಕ್ಕೆ ನಾವು ಏನು ಕೊಡುಗೆ ನೀಡಬಹುದು ಎಂಬ ಚಿಂತನೆ ವಿದ್ಯಾರ್ಥಿಗಳಲ್ಲಿ ಮೂಡಿಸುವುದು ಯೋಜನೆಯ ಆಶಯವಾಗಿದೆ ಎಂದು ಅವರು ಹೇಳಿದರು.
ಎನ್‌ಎಸ್‌ಎಸ್‌ ವಿದ್ಯಾರ್ಥಿಗಳನ್ನು ಕೇವಲ ಉತ್ತಮ ವಿದ್ಯಾರ್ಥಿಗಳನ್ನಾಗಿ ರೂಪಿಸುವುದಲ್ಲದೆ, ಜವಾಬ್ದಾರಿಯುತ ಹಾಗೂ ಉತ್ತಮ ನಾಗರಿಕರನ್ನಾಗಿ ರೂಪಿಸುವ ಕಾರ್ಯ ಮಾಡುತ್ತಿದೆ. ಗಿಡ ನೆಡುವುದು, ಗ್ರಾಮ ಸ್ವಚ್ಛತೆ, ರಕ್ತದಾನ ಜಾಗೃತಿ, ಆರೋಗ್ಯ ಶಿಬಿರ ಹಾಗೂ ಸಾಕ್ಷರತಾ ಕಾರ್ಯಕ್ರಮ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್‌ ‘ಅ’ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಪ್ರಾಣೇಶ ಅವರು ಸಂಸ್ಥಾಪನಾ ದಿನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್‌ಎಸ್‌ಎಸ್‌ ‘ಬ’ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಶಂಕ್ರೆಪ್ಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave A Reply

Your email address will not be published.