ಕಲಬುರಗಿ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕಲಬುರಗಿ ಗ್ರಾಮೀಣ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ಪೋಷಣ ಮಾಸಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ನಂದೂರ ಕೆ. ಗ್ರಾಮದಲ್ಲಿ ಆಯೋಜಿಸಲಾಯಿತು.
‘ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ’ ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ್ ನವಲೆ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ್ ಸಿಂಧೆ ಅವರು ಪೋಷಣ ಮಾಸಾಚರಣೆಯ ಮಹತ್ವ ಹಾಗೂ ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರದ ಕುರಿತು ಮಾತನಾಡಿದರು.
ಉದ್ಘಾಟನಾ ಭಾಷಣದಲ್ಲಿ ನ್ಯಾಯಾಧೀಶ ಶ್ರೀನಿವಾಸ್ ನವಲೆ ಅವರು ಬಾಲ್ಯ ವಿವಾಹದಿಂದ ಉಂಟಾಗುವ ಸಾಮಾಜಿಕ ಹಾಗೂ ಆರೋಗ್ಯ ಸಂಬಂಧಿತ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ಬಾಲ್ಯದಲ್ಲೇ ಗರ್ಭಧಾರಣೆಯಾಗುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ವಿವರಿಸಿದ ಅವರು, ಮಕ್ಕಳು ಹಾಗೂ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವುದು ಅತ್ಯಂತ ಅಗತ್ಯ ಎಂದು ತಿಳಿಸಿದರು. ಕಾನೂನು ಅರಿವು ಹಾಗೂ ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಅನ್ನಪ್ರಾಶನ, ಅಕ್ಷರಾಭ್ಯಾಸ ಹಾಗೂ ಸೀಮಂತ ಕಾರ್ಯಕ್ರಮಗಳು ನೆರವೇರಿದವು. ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಪೌಷ್ಟಿಕ ಆಹಾರ, ಆರೋಗ್ಯ ಮತ್ತು ಶಿಕ್ಷಣದ ಕುರಿತು ಜಾಗೃತಿ ಮೂಡಿಸಲಾಯಿತು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪದ್ಮಾವತಿ ಅವರು ಸ್ವಾಗತಿಸಿದರು. ಹಿರಿಯ ಮೇಲ್ವಿಚಾರಕಿ ಮಂಜುಳಾ ತುಪ್ಪದ ಅವರು ವಂದನಾರ್ಪಣೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೀಮಬಾಯಿ, ವಲಯದ ಮೇಲ್ವಿಚಾರಕಿಯರಾದ ಗುಲ್ಜಿಯಾ ಬೇಗಂ, ಇಂದಿರಾ, ಗೀತಾ, ವೈಶಾಲಿ ಹಾಗೂ ಶಿಲ್ಪಾ ಸೇರಿದಂತೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಫಲಾನುಭವಿಗಳು, ಸ್ತ್ರೀಶಕ್ತಿ ಸಂಘಗಳ ಮಹಿಳೆಯರು, ನಂದೂರ ಬಿ. ವಲಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಾಂತಾ ಸರಡಗಿ ನಿರೂಪಿಸಿದರು.