ಚಿತ್ತಾಪುರ: ಬಸವನ ಬಾಗೇವಾಡಿಯ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ತಹಶೀಲ್ ಕಚೇರಿ ಎದರು ಪ್ರತಿಭಟನೆ ನಡೆಸಿದರು.
ಚಿತ್ತಾಪುರ: ಬಸವನ ಬಾಗೇವಾಡಿಯ ಅಪ್ರಾಪ್ತ ದಲಿತ ಬಾಲಕಿಯರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಬೇಕು ಹಾಗೂ ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್‍ಐ ಅರ್ಜುನ ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ತಾಲೂಕು ಕಾರ್ಯಕರ್ತರು ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಚಾಮರಾಜನಗರ ಒಳಗೊಂಡಂತೆ ರಾಜ್ಯಾದ್ಯಂತ ಆಮ್ಲಜನಕ ಕೊರತೆಯಿಂದ ಸಾವನಪ್ಪಿರುವ ಬಡ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು. ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಮಾಸಿಕ 15 ಸಾವಿರ ರೂ. ಆರ್ಥಿಕ ನೆರವು ನೀಡಬೇಕು. ಕೊರೊನಾ ವಾರಿಯರ್ಸ್ ವೈದ್ಯರು, ನರ್ಸ್, ಆಶಾ ಕಾರ್ಯಕರ್ತೆಯರು, ಆಂಬ್ಯುಲೆನೆಸ್ಸ್ ಚಾಲಕರು, ಆಸ್ಪತ್ರೆಯ ಡಿ ದರ್ಜೆ ನೌಕರರು, ಪೌರಕಾರ್ಮಿಕರು ಹಾಗೂ ಚಿತಾಗಾರದಲ್ಲಿ ಕೆಲಸ ಮಾಡುತ್ತಿರುವವರ ಸಂಬಳ ಹೆಚ್ಚಿಸಿ ಅಗತ್ಯ ಸೌಲಭ್ಯ ಕಲ್ಪಿಸಿಕೊಡಬೇಕು. ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಬಡತನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಬೇಕು. ಬಾಕಿ ವಿದ್ಯಾರ್ಥಿಗಳ ಸ್ಕಾಲರ್‍ಶಿಪ್ ತಕ್ಷಣ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಬೇಡಿಕೆ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರಿಗೆ ಸಲ್ಲಿಸಿದರು.
ಕಾರ್ಯಕರ್ತರಾದ ಜಯಂತ ಗುಂಟೆನೋರ್, ಲಕ್ಷ್ಮಣ ಅಮಕಾರ್, ಶಿವು ಹಾಬಾಳ, ಶಂಕರ ಬುರ್ಲಿ, ಶಂಕರ ಗಂಗನೂರ, ಸಾಬಣ್ಣ ಸಿದ್ದನೋರ್ ಸೇರಿದಂತೆ ಇತರರು ಇದ್ದರು.