ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳಲ್ಲಿ ಶಾಲಾಪೂರ್ವ ಶಿಕ್ಷಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್ ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಲಿಕೆ–ಟಾಟಾ ಟ್ರಸ್ಟ್ ಸಹಯೋಗದಲ್ಲಿ ಶಾಲಾಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮದಡಿ ಕಲಬುರಗಿಯ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿರುವ ಆರನೇ ಆವೃತ್ತಿಯ ಶಾಲಾಪೂರ್ವ ಶಿಕ್ಷಣದ ದೃಷ್ಟಿಕೋನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಪೂರ್ವ ಹಂತದಲ್ಲಿಯೇ ಮಕ್ಕಳ ಕಲಿಕೆಗೆ ಭದ್ರ ಬುನಾದಿ ಹಾಕುವುದು ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ತರಬೇತಿಯಲ್ಲಿ ತಿಳಿಸುವ ವಿಷಯಗಳನ್ನು ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ಬಳಿಕ, ಕಾರ್ಯಕ್ರಮದ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳ ಯೋಜನಾಧಿಕಾರಿಗಳೊಂದಿಗೆ ಚರ್ಚಿಸಿ, ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸುವ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು.
ತರಬೇತಿ ಕಾರ್ಯಕ್ರಮದಲ್ಲಿ ಕಲಿಕೆ–ಟಾಟಾ ಟ್ರಸ್ಟ್ನ ಶಾಲಾಪೂರ್ವ ಶಿಕ್ಷಣ ಕಾರ್ಯಕ್ರಮದ ಮುಖ್ಯಸ್ಥೆ ಚಿತ್ಕಲಾಂಬ, ಕಾರ್ಯಕ್ರಮ ಅಧಿಕಾರಿಗಳಾದ ಕೊಟ್ರೇಶ ಎ.ವೈ. ಮತ್ತು ಸವಿತಾ ಸೇರಿದಂತೆ ಏಳು ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರು, ಕಾರ್ಯಕ್ರಮ ಸಂಯೋಜಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಭಾಗವಹಿಸಿದ್ದರು.