ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲಿನ ಆರೋಪಗಳ ಕುರಿತಾಗಿಯೂ ಮಾಹಿತಿ ಕಲೆಹಾಕುತ್ತಿದ್ದಾರೆ. ವಿಶೇಷವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ನೇಮಕಾತಿ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಹಾಗೂ OMR ಶೀಟ್‌ಗಳನ್ನು ತಿದ್ದುಪಡಿ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಈ ಅಕ್ರಮದ ಸಂಬಂಧ ಇ.ಡಿ ಅಧಿಕಾರಿಗಳು ಈಗಾಗಲೇ ಶಿವಶಂಕರಪ್ಪ ಸಾಹುಕಾರ್, ಜ್ಞಾನ ಕುಮಾರ್ ಮತ್ತು ಗೀತಾ ಎಂಬ ಮೂವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಈ ಮೂವರು ಆರೋಪಿಗಳು ಹಾರಿಕೆಯ ಉತ್ತರಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದ್ದು, ತನಿಖೆಯ ಈ ಎಲ್ಲಾ ಪ್ರಮುಖ ಅಂಶಗಳನ್ನು ಇ.ಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.